ಛತ್ತೀಸ್‌ಗಢ: ನಕ್ಸಲರು ನಡೆಸಿದ ಬಾಂಬ್ ಸ್ಫೋಟದಲ್ಲಿ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ಯ ಇಬ್ಬರು ಯೋಧರು ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ನಾರಾಯಣಪುರದಲ್ಲಿ ಶನಿವಾರ(ಅ.19) ರಂದು ನಡೆದಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಅಬುಜ್‌ಮದ್‌ನಲ್ಲಿ ನಕ್ಸಲ್ ವಿರೋಧಿ ಶೋಧ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿದ್ದ ತಂಡದ ಮೇಲೆ ನಕ್ಸಲರು ಸುಧಾರಿತ ಸ್ಫೋಟಕ ಸಾಧನ (ಐಇಡಿ) ಸ್ಫೋಟಿಸಿದ್ದಾರೆ ಎನ್ನಲಾಗಿದೆ.
ಈ ಹಿಂದೆ ಜುಲೈ ತಿಂಗಳಲ್ಲಿ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದರು ಅಲ್ಲದೆ ನಾಲ್ವರು ಗಾಯಗೊಂಡಿದ್ದರು. ಇದಾದ ಬಳಿಕ ಭದ್ರತಾ ಪಡೆಗಳು ನಕ್ಸಲ್-ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದು ಅದರಂತೆ ಶನಿವಾರ ಕಾರ್ಯಾಚರಣೆ ಮುಗಿಸಿ ಹಿಂತಿರುಗುತ್ತಿರುವ ವೇಳೆ ನಕ್ಸಲರು ಪೈಪ್ ಬಾಂಬ್ ಸ್ಫೋಟಗೊಳಿಸಿದ್ದಾರೆ.
ರಾಜ್ಯದಲ್ಲಿ ಅತಿ ಹೆಚ್ಚು ನಕ್ಸಲೀಯರ ಹತ್ಯೆಗಳು ದಾಖಲಾಗಿದ್ದು. 2024 ರ ಮೊದಲಾರ್ಧದಲ್ಲಿ ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಗಳು 140 ಕ್ಕೂ ಹೆಚ್ಚು ನಕ್ಸಲರನ್ನು ಹೊಡೆದುರುಳಿಸಿದ್ದಾರೆ.