ಮನೆ ರಾಜಕೀಯ ತಪ್ಪನ್ನು ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ: ಜೆಡಿಎಸ್

ತಪ್ಪನ್ನು ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ: ಜೆಡಿಎಸ್

0

ಬೆಂಗಳೂರು(Bengaluru): ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಸ್ಥಾಪಿಸಲಾಗಿರುವ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅವರಿಗೆ ಆಹ್ವಾನ ನೀಡಲಾಗಿತ್ತು ಎಂಬ ಬಿಜೆಪಿ ವಾದವನ್ನು ಜೆಡಿಎಸ್‌ ಶನಿವಾರ ಕಟುವಾಗಿ ಟೀಕಿಸಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ತಪ್ಪನ್ನೇ ಲಜ್ಜೆಗೆಟ್ಟು ಸಮರ್ಥಿಸಿಕೊಳ್ಳುವುದು ಕಮಲಪಕ್ಷಕ್ಕೆ ಸಿದ್ಧಿಸಿರುವ ಕಲೆ. ಅಧಿಕೃತ ಆಹ್ವಾನ ಪತ್ರಿಕೆಯಲ್ಲಿ ಹೆಸರಿಲ್ಲ. ಆದರೆ, ಮುಖ್ಯಮಂತ್ರಿಗಳೇ ಪತ್ರ ಬರೆದು ದೇವೇಗೌಡರನ್ನು ಆಹ್ವಾನಿಸಿದ್ದಾರೆಂದು ಜನರ ದಿಕ್ಕು ತಪ್ಪಿಸುತ್ತಿರುವ ರಾಜ್ಯ ಬಿಜೆಪಿ ಸರಕಾರ, ಅಸಲಿ ಕಥೆಯನ್ನೇ ಮುಚ್ಚಿಡುತ್ತಿದೆ ಎಂದು ಆರೋಪಿಸಿದೆ.

‘ನವೆಂಬರ್‌ 11ರ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿಗಳು, ಪತ್ರ ಬರೆದಿದ್ದು ಯಾವಾಗ? ಆ ಪತ್ರವನ್ನು ಮಾಜಿ ಪ್ರಧಾನಿಗಳ ನಿವಾಸಕ್ಕೆ ತಲುಪಿಸಿದ್ದು ಯಾವಾಗ? ಎಂದು ಜೆಡಿಎಸ್‌ ಪ್ರಶ್ನೆ ಮಾಡಿದೆ.‘ಕಮಲದವರ ಕಣ್ಣಿಗೆ ಕಾಮಾಲೆ ಬಡಿದಿದೆಯಾ, ಹೇಗೆ? ಮುಖ್ಯಮಂತ್ರಿಗಳು ಬರೆದ ʼಘನವೆತ್ತʼ ಪತ್ರವನ್ನೊಮ್ಮೆ ಸಂಘಸಂಸ್ಕಾರʼದ ಬಿಜೆಪಿಗರು ಗಮನಿಸಬೇಕು. ಪತ್ರದಲ್ಲಿ ದೇವೇಗೌಡರ ಹೆಸರೆಲ್ಲಿ ಬರೆಯಲ್ಪಟ್ಟಿದೆ? (ಕೊನೆಯಲ್ಲಿ) ಕನ್ನಡ ನೆಲದ ಏಕೈಕ ಪ್ರಧಾನಿಯಾಗಿದ್ದ ಮೇರು ನಾಯಕರಿಗೆ ಪತ್ರ ಬರೆಯುವ ಸಂಸ್ಕಾರ, ಶಿಷ್ಟಾಚಾರ ಇದೇನಾ?’ ಎಂದು ಕೇಳಿದೆ.

‘ಮರುದಿನದ 12.50ರ ಸಮಾರಂಭಕ್ಕೆ ರಾತ್ರಿ 9 ಗಂಟೆಗೆ ಕಾಟಾಚಾರದ ಕರೆ ಮಾಡಿದ ಮುಖ್ಯಮಂತ್ರಿಗಳು, ತಾವು ಬರೆದ ಪತ್ರವನ್ನು ತಲುಪಿಸಿದ್ದು ಮಧ್ಯರಾತ್ರಿ 12.30 ಗಂಟೆಗೆ. ಹಾಗಾದರೆ, ಅವರ ಮೊದಲ ಪತ್ರ ಹೋಗಿದ್ದು ಯಾರಿಗೆ? ಇಂಥ ಹಿರಿಯರ ವಿಷಯದಲ್ಲಿ ಮುಖ್ಯಮಂತ್ರಿಗಳು ವರ್ತಿಸುವ ರೀತಿ ಹೀಗೇನಾ?’ ಎಂದು ಜೆಡಿಎಸ್‌ ಪ್ರಶ್ನಿಸಿದೆ.

‘ಇದರಲ್ಲಿ ಸುಳ್ಳಾಡುವುದೇನಿದೆ? ಮುಖ್ಯಮಂತ್ರಿಗಳು ಬರೆದ ಪತ್ರವನ್ನು ಇಲ್ಲಿ ಲಗತ್ತಿಸಲಾಗಿದೆ. ಹಾಗಾದರೆ, ಮುಖ್ಯಮಂತ್ರಿಗಳೇ ಎಲ್ಲವನ್ನೂ ಹೇಳಲಿ. ಜನರಿಗೂ ಸತ್ಯ ಯಾವುದು? ಸುಳ್ಳು ಯಾವುದು? ಎನ್ನುವುದು ತಿಳಿಯಲಿ. ಸತ್ಯ ಹೇಳುವ ದಮ್ಮು, ತಾಕತ್ತು ಮುಖ್ಯಮಂತ್ರಿಗಳಿಗೆ ಇದೆ ಎಂದು ನಾವು ಭಾವಿಸುತ್ತೇವೆ’ ಎಂದು ಜೆಡಿಎಸ್‌ ಹೇಳಿದೆ.

ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ

ಇನ್ನು ಕನ್ನಡದ ಆಸ್ಮಿತೆ ಪ್ರಶ್ನೆ. ಬಿಜೆಪಿಗೆ ನಾಚಿಕೆಯಾಗಬೇಕು, ಹಿಂದಿ ಹೇರಿಕೆ ವಾಕರಿಕೆ ಬರುವಷ್ಟಿದೆ. ಉದ್ಯೋಗದಲ್ಲಿ ಕನ್ನಡಿಗರಿಗೆ ಪಂಗನಾಮ, ಈ ನೆಲದ ಸಂಸ್ಕೃತಿ, ಭಾಷೆ, ಆಚಾರ-ವಿಚಾರಗಳನ್ನು ಹತ್ತಿಕ್ಕಿ, ಇಡೀ ದಕ್ಷಿಣ ಭಾರತೀಯರನ್ನು ದೆಹಲಿ ಗುಲಾಮರನ್ನಾಗಿ ಮಾಡಲು ಹೊರಟಿರುವ ಬಿಜೆಪಿಗರಾ ಕನ್ನಡದ ಮಣ್ಣಿನ ಮಕ್ಕಳನ್ನು ಗುರುತಿಸಿದ್ದು?’ ಎಂದು ಜಾತ್ಯತೀತ ಜನತಾದಳ ಪ್ರಶ್ನೆ ಮಾಡಿದೆ.

ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ

‘ಸಬ್ ಕಾ ಸಾಥ್, ಸಬ್ ಕಾ ವಿಕಾಸ್’; ಇದು ಭಾರತ ಕಂಡ ಪರಮ ಢೋಂಗೀ ಘೋಷಣೆ. ಇದಕ್ಕೆ ʼಸಬ್ ಕಾ ಸರ್ವನಾಶ್ʼ ಎಂದು ಸೇರಿದರೆ ಪರಿಪೂರ್ಣ. ಕರ್ನಾಟಕದಲ್ಲಿ ಶಿಕ್ಷಣ, ಧರ್ಮ, ಜಾತಿ, ಆಚಾರ, ವಿಚಾರ, ಆಹಾರ, ಉಡುಪುಗಳ ವಿಷಯದಲ್ಲೂ ಬಿಜೆಪಿ ಮಾಡಿದ್ದು ಸಾಕ್ಷಾತ್ ಸರ್ವನಾಶವೇ’ ಎಂದು ಜೆಡಿಎಸ್‌ ಪ್ರತಿಪಾದಿಸಿದೆ.

ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ?

ಕುಟುಂಬ ರಾಜಕಾರಣ ಅಂತೀರಾ. ಗುಜರಾತಿನಿಂದ ಶುರುವಾಗಿ ದೆಹಲಿವರೆಗೂ ಹಬ್ಬಿ, ಬಿಸಿಸಿಐ ಒಳಹೊಕ್ಕಿ ಕೂತಿದ್ದು ಯಾರ ಕುಟುಂಬ? ಕರ್ನಾಟಕದಲ್ಲಿ ಬೆಳೆದು ನಿಂತ ಬಿಜೆಪಿ ವಂಶವೃಕ್ಷಗಳೆಷ್ಟು? ಕಾಶ್ಮೀರದಿಂದ ಕನ್ಯಾಕುಮಾರಿವರೆಗೆ, ಗುಜರಾತ್ ನಿಂದ ಒಡಿಶಾವರೆಗೆ ವ್ಯಾಪಿಸಿರುವ ಬಿಜೆಪಿ ವಂಶವೃಕ್ಷಗಳ ಕೊಂಬೆಗಳ ಲೆಕ್ಕ ಬಿಚ್ಚಿಡಬೇಕೆ?’ ಎಂದು ಬಿಜೆಪಿ ಸವಾಲು ಹಾಕಿದೆ.

ಹಿಂದಿನ ಲೇಖನಆನ್’ಲೈನ್’ನಲ್ಲಿ ಹಣದ ವ್ಯವಹಾರ: ವಂಚನೆಗೊಳಗಾದ ಉಪನ್ಯಾಸಕಿ ಆತ್ಮಹತ್ಯೆ
ಮುಂದಿನ ಲೇಖನಬೆಂಗಳೂರು: 15 ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ; ದೈಹಿಕ ಶಿಕ್ಷಕನ ಬಂಧನ