ಉತ್ತರಕನ್ನಡ: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 20 ಪ್ರಯಾಣಿಕರು ಮೃತಪಟ್ಟು ಹಲವು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಅಲ್ಮೋರಾದಲ್ಲಿ ಸೋಮವಾರ (ನ.4) ಸಂಭವಿಸಿದೆ.
ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಯ ವೇಳೆಗೆ ಅಪಘಾತ ಸಂಭವಿಸಿದ್ದು ಈ ವೇಳೆ ಬಸ್ಸಿನಲ್ಲಿ ಕನಿಷ್ಠ 35 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಪೊಲೀಸರು ಮತ್ತು ಸ್ಥಳೀಯರ ತಂಡಗಳು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.
ಬಸ್ಸಿನಲ್ಲಿ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ ತಿಳಿಸಿದ್ದಾರೆ. ಅಲ್ಲದೆ ಗಂಭೀರ ಗಾಯಗೊಂಡವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದಿದ್ದಾರೆ.
ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ವಿಪತ್ತು ನಿರ್ವಹಣಾ ಕಾರ್ಯದರ್ಶಿ, ಕುಮಾವೂನ್ ವಿಭಾಗದ ಕಮಿಷನರ್ ಮತ್ತು ಅಲ್ಮೋರಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರೊಂದಿಗೆ ಮಾತನಾಡಿ ಅಪಘಾತದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಅಲ್ಲದೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದು ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.