ಉನ್ನಾವ್(ಉತ್ತರ ಪ್ರದೇಶ): ಉತ್ತರ ಪ್ರದೇಶದ ಉನ್ನಾವ್ ಜಿಲ್ಲೆಯಲ್ಲಿ ಇಂದು ಮುಂಜಾನೆ ಡಬಲ್ ಡೆಕ್ಕರ್ ಬಸ್ಸೊಂದು ಹಾಲಿನ ಕಂಟೈನರ್‌ಗೆ ಡಿಕ್ಕಿಯಾಗಿ 18 ಜನರು ಸಾವನ್ನಪ್ಪಿದ್ದು, 30ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಬಸ್ ಬಿಹಾರದ ಸೀತಾಮರ್ಹಿಯಿಂದ ದೆಹಲಿಗೆ ಸಂಚರಿಸುತ್ತಿತ್ತು ಎಂದು ಹೇಳಲಾಗುತ್ತಿದೆ.
ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ವ್ಯಕ್ತಪಡಿಸಿ, ಅಗತ್ಯ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಲಕ್ನೋ-ಆಗ್ರಾ ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತ ಘಟಿಸಿದೆ. ಅತಿ ವೇಗವಾಗಿ ಬಸ್ ಚಲಾಯಿಸಿದ್ದೇ ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಪೊಲೀಸರು ಮೃತದೇಹಗಳನ್ನು ಗುರುತಿಸುತ್ತಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗೆ ಆಸ್ಪತ್ರೆಗೆ ರವಾನಿಸಲಾಗಿದೆ. ಹಲವರ ಪರಿಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.













