ಮುಂಬೈ: ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹತ್ತು ಮಂದಿ ಮೃತಪಟ್ಟು ಹಲವರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ ಗೊಂಡಿಯಾ ಜಿಲ್ಲೆಯ ಕೊಹ್ಮಾರಾ ರಾಜ್ಯ ಹೆದ್ದಾರಿಯಲ್ಲಿ ಶುಕ್ರವಾರ(ನ.29) ಸಂಭವಿಸಿದೆ.
ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ಸು ಮೂವತ್ತೈದು ಪ್ರಯಾಣಿಕರನ್ನು ಹೊತ್ತು ನಾಗ್ಪುರದಿಂದ ಗೊಂಡಿಯಾಕ್ಕೆ ತೆರಳುತ್ತಿತ್ತು ಈ ವೇಳೆ ಕೊಹ್ಮಾರಾ ರಾಜ್ಯ ಹೆದ್ದಾರಿಯಲ್ಲಿ ವೇಗವಾಗಿ ಸಂಚರಿಸುತ್ತಿರುವ ವೇಳೆ ತಿರುವಿನಲ್ಲಿ ಎದುರಿನಿಂದ ಬಂದ ಬೈಕಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಬಸ್ ಚಾಲಕ ಎಡಕ್ಕೆ ತಿರುಗಿಸಿದ ಪರಿಣಾಮ ಬಸ್ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಘಟನೆಯಲ್ಲಿ ಹತ್ತು ಮಂದಿ ಮೃತಪಟ್ಟಿದ್ದು ಗಾಯಗೊಂಡವರನ್ನು ಹತ್ತಿರದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಘಟನೆ ನಡೆದ ವೇಳೆ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದು ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.