ಮನೆ ಸುದ್ದಿ ಜಾಲ ಲಾಡ್ಲೆ ಮಶಾಕ್ ದರ್ಗಾ ವಿವಾದ ಸೇರಿ 52 ಕ್ರಿಮಿನಲ್ ಪ್ರಕರಣ ಹಿಂಪಡೆಲು ಸಚಿವ ಸಂಪುಟ ಒಪ್ಪಿಗೆ:...

ಲಾಡ್ಲೆ ಮಶಾಕ್ ದರ್ಗಾ ವಿವಾದ ಸೇರಿ 52 ಕ್ರಿಮಿನಲ್ ಪ್ರಕರಣ ಹಿಂಪಡೆಲು ಸಚಿವ ಸಂಪುಟ ಒಪ್ಪಿಗೆ: ಬಿಜೆಪಿ ಆಕ್ರೋಶ

0

ಬೆಂಗಳೂರು, ಮೇ 22: ಕನ್ನಡ ಪರ ಹೋರಾಟಗಾರರು, ರೈತ ಸಂಘಟನೆಗಳ ಸದಸ್ಯರು ಹಾಗೂ ವಿವಿಧ ಚಳವಳಿಗಳಲ್ಲಿ ಭಾಗವಹಿಸಿದ್ದವರ ವಿರುದ್ಧ ದಾಖಲಾಗಿದ್ದ 52 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ರಾಜ್ಯ ಸಚಿವ ಸಂಪುಟ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಪ್ರಕರಣಗಳಲ್ಲಿ ಆಳಂದ ತಾಲೂಕಿನ ಲಾಡ್ಲೆ ಮಶಾಕ್ ದರ್ಗಾ ವಿವಾದಕ್ಕೆ ಸಂಬಂಧಿಸಿದ ಏಳು ಪ್ರಕರಣಗಳೂ ಸೇರಿವೆ. ಸರ್ಕಾರದ ಈ ತೀರ್ಮಾನ ಇದೀಗ ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿದೆ.

ಸಚಿವ ಸಂಪುಟದ ಸಭೆಯಲ್ಲಿ ಕೈಗೊಳ್ಳಲಾದ ಈ ನಿರ್ಧಾರ ಪ್ರಕಾರ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ವಿರುದ್ಧ ದಾಖಲಾಗಿದ್ದ 10 ಪ್ರಕರಣಗಳನ್ನು ಹಿಂಪಡೆಯಲು ಒಪ್ಪಿಗೆ ನೀಡಲಾಗಿದೆ. ಜೊತೆಗೆ ಕಾವೇರಿ ಹೋರಾಟ, ಕನ್ನಡ ಪರ ಚಳವಳಿ, ಕಳಸಾ-ಬಂಡೂರಿ ಯೋಜನೆಗೆ ಸಂಬಂಧಿಸಿದ ಪ್ರತಿಭಟನೆಗಳು, ರೈತರ ಹೋರಾಟಗಳು ಹಾಗೂ ದಲಿತ ಸಂಘಟನೆಗಳ ಚಳವಳಿಗಳ ಸಂದರ್ಭದಲ್ಲಿ ದಾಖಲಾಗಿದ್ದ ಹಲವು ಪ್ರಕರಣಗಳನ್ನು ವಾಪಸ್ ಪಡೆಯಲು ಸರ್ಕಾರ ಮುಂದಾಗಿದೆ.

ರಾಜ್ಯ ಸರ್ಕಾರದ ಕ್ರಮಕ್ಕೆ ಬಿಜೆಪಿ ನಾಯಕರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಎಂಎಲ್ಸಿ ಸಿ.ಟಿ. ರವಿ ಸರ್ಕಾರದ ನಿರ್ಧಾರವನ್ನು ಟೀಕಿಸಿ ಮಾತನಾಡಿದ್ದು, ರಾಜ್ಯ ಸರ್ಕಾರ ಒಂದು ಕಡೆ ಹಿಂದೂ ಕಾರ್ಯಕರ್ತರನ್ನು ಗುರಿಯಾಗಿಸಿಕೊಂಡು ಸುಳ್ಳು ಪ್ರಕರಣ ದಾಖಲಿಸುತ್ತಿದೆ ಎಂದು ಆರೋಪಿಸಿದ್ದಾರೆ. ಜೊತೆಗೆ ಪೊಲೀಸ್ ಇಲಾಖೆಯ ಮೂಲಕ ರೌಡಿಶೀಟ್ ತೆರೆಯಿಸಿ ಕಿರುಕುಳ ನೀಡುವ ಕೆಲಸ ನಡೆಯುತ್ತಿದೆ ಎಂದು ಹೇಳಿದ್ದಾರೆ.

ಇನ್ನೊಂದು ಕಡೆ ಮುಸ್ಲಿಂ ಸಮುದಾಯದವರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯುವ ಮೂಲಕ ಸರ್ಕಾರ ತಪ್ಪು ಸಂದೇಶ ರವಾನಿಸುತ್ತಿದೆ ಎಂದು ಸಿ.ಟಿ. ರವಿ ಆರೋಪಿಸಿದ್ದಾರೆ. ಬೆಂಕಿ ಹಚ್ಚುವ ಪ್ರಕರಣಗಳು, ಸಾರ್ವಜನಿಕ ಆಸ್ತಿ ಹಾನಿಗೆ ಸಂಬಂಧಿಸಿದ ಗಂಭೀರ ಪ್ರಕರಣಗಳನ್ನು ವಾಪಸ್ ಪಡೆಯುವ ಮೂಲಕ ಸರ್ಕಾರ ಅಪರಾಧಿಗಳನ್ನು ಬೆಂಬಲಿಸುತ್ತಿದೆ ಎಂಬ ಅಭಿಪ್ರಾಯ ಮೂಡುತ್ತಿದೆ ಎಂದು ಅವರು ಕಿಡಿ ಕಾರಿದ್ದಾರೆ.

ಇದೇ ವೇಳೆ 52 ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಕನ್ನಡ ಸಂಘಟನೆಗಳು, ರೈತರು ಹಾಗೂ ವಿವಿಧ ಹೋರಾಟಗಾರರ ವಿರುದ್ಧ ದಾಖಲಾಗಿದ್ದ ಪ್ರಕರಣಗಳನ್ನು ಪರಿಶೀಲಿಸಿ ಸಚಿವ ಸಂಪುಟ ಉಪ ಸಮಿತಿಗೆ ಶಿಫಾರಸು ಮಾಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ. ಕಾನೂನಿನ ವ್ಯಾಪ್ತಿಯಲ್ಲಿ ಹಾಗೂ ಎಲ್ಲಾ ವಿಚಾರಗಳನ್ನು ಪರಿಶೀಲಿಸಿದ ಬಳಿಕವೇ ಪ್ರಕರಣಗಳನ್ನು ಹಿಂಪಡೆಯುವ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವರು ಹೇಳಿದ್ದಾರೆ.

ಲಾಡ್ಲೆ ಮಶಾಕ್ ದರ್ಗಾ ವಿವಾದಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಹಿಂಪಡೆಯುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ಬಗ್ಗೆ ಎಲ್ಲ ವಿಚಾರಗಳನ್ನೂ ಸಮಗ್ರವಾಗಿ ಚರ್ಚಿಸಿ ನಿರ್ಧಾರ ಮಾಡಲಾಗಿದೆ ಎಂದು ತಿಳಿಸಿದ್ದಾರೆ. ಇದು ತಕ್ಷಣ ತೆಗೆದುಕೊಂಡ ನಿರ್ಧಾರವಲ್ಲ. ಕಾನೂನಾತ್ಮಕವಾಗಿ ಹಾಗೂ ಆಡಳಿತಾತ್ಮಕವಾಗಿ ಎಲ್ಲಾ ಅಂಶಗಳನ್ನು ಪರಿಶೀಲಿಸಿ ಸರ್ಕಾರ ಮುಂದಾಗಿದೆ ಎಂದು ಡಾ.ಜಿ. ಪರಮೇಶ್ವರ್ ಹೇಳಿದ್ದಾರೆ.

ರಾಜಕೀಯ ವಲಯದಲ್ಲಿ ಈ ವಿಚಾರ ಇದೀಗ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಆಡಳಿತ ಪಕ್ಷ ಮತ್ತು ವಿರೋಧ ಪಕ್ಷಗಳ ನಡುವೆ ಆರೋಪ-ಪ್ರತ್ಯಾರೋಪಗಳು ಜೋರಾಗಿವೆ. ಸರ್ಕಾರದ ನಿರ್ಧಾರಕ್ಕೆ ಕನ್ನಡ ಪರ ಸಂಘಟನೆಗಳು ಮತ್ತು ಕೆಲವು ರೈತ ಸಂಘಟನೆಗಳು ಬೆಂಬಲ ಸೂಚಿಸಿದ್ದರೆ, ಬಿಜೆಪಿ ನಾಯಕರು ಮಾತ್ರ ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.