ಬೆಂಗಳೂರು (Bengaluru): ವೃಕ್ಷಮಾತೆ ಸಾಲುಮರದ ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ.
ಸಾಲುಮರದ ತಿಮ್ಮಕ್ಕ ಅವರನ್ನು ಪರಿಸರ ರಾಯಭಾರಿಯನ್ನಾಗಿ ನೇಮಿಸಿರುವ ರಾಜ್ಯ ಸರ್ಕಾರ, ಮುಂದಿನ ಆದೇಶದವರೆಗೆ ಅವರಿಗೆ ಸಂಪುಟ ದರ್ಜೆ ಸಚಿವರ ಸ್ಥಾನಮಾನ ನೀಡಿ ಆದೇಶ ಹೊರಡಿಸಿದೆ.
ತಿಮ್ಮಕ್ಕ ಅವರಿಗೆ ಸಂಪುಟ ದರ್ಜೆ ಸ್ಥಾನಮಾನ ನೀಡುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚೆಗೆ ಘೋಷಿಸಿದ್ದರು. ಅದರಂತೆ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ (ಡಿಪಿಎಆರ್) ಶಿಷ್ಟಾಚಾರ ವಿಭಾಗ ಅಧಿಸೂಚನೆ ಹೊರಡಿಸಿದೆ.
ತಿಮ್ಮಕ್ಕ ಅವರಿಗೆ ವೇತನ ಮತ್ತು ಭತ್ಯೆ, ವಸತಿಗೃಹ, ಸಿಬ್ಬಂದಿ, ಕಾರು ಸೇರಿದಂತೆ ಸಂಪುಟ ದರ್ಜೆ ಸಚಿವರಿಗೆ ದೊರೆಯುವ ಹಲವು ಸೌಲಭ್ಯಗಳು ದೊರೆಯಲಿವೆ ಎಂದು ಡಿಪಿಎಆರ್ ಮೂಲಗಳು ತಿಳಿಸಿವೆ.