ಮನೆ ಕಾನೂನು ವಿಧಾನಸಭೆ, ಪರಿಷತ್‌ ನ 42 ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನಮಾನ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

ವಿಧಾನಸಭೆ, ಪರಿಷತ್‌ ನ 42 ಸದಸ್ಯರಿಗೆ ಸಂಪುಟ ದರ್ಜೆ ಸ್ಥಾನಮಾನ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್‌

0

ವಿಧಾನಸಭೆಯ 39 ಸದಸ್ಯರು ಮತ್ತು 3 ವಿಧಾನ ಪರಿಷತ್‌ ಸದಸ್ಯರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಿ ವಿವಿಧ ನಿಗಮ, ಮಂಡಳಿಗಳಿಗೆ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದು ಸಂವಿಧಾನದ 164 (1ಎ) ಮತ್ತು 191ನೇ ವಿಧಿಯ ಸ್ಪಷ್ಟ ಉಲ್ಲಂಘನೆಯಾಗಿದ್ದು, ಬೊಕ್ಕಸಕ್ಕೆ ಅನಗತ್ಯ ಹೊರೆಯಾಗಿರುವ ಈ ಹುದ್ದೆಗಳನ್ನು ರದ್ದುಗೊಳಿಸಬೇಕು ಎಂದು ಆಕ್ಷೇಪಿಸಲಾಗಿರುವ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಶುಕ್ರವಾರ ಕರ್ನಾಟಕ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.

Join Our Whatsapp Group

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್‌ಪಿಸಿಬಿ) ಮುಖ್ಯ ಎಂಜಿನಿಯರ್ ಆದ ಕೋಣನಕುಂಟೆ ಕ್ರಾಸ್‌ ನಿವಾಸಿ ಸೂರಿ ಪಾಯಲ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ ಐ ಅರುಣ್‌ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.

ಅರ್ಜಿದಾರರ ಪರ ಹಿರಿಯ ವಕೀಲ ಜೆ ಸಾಯಿ ದೀಪಕ್‌ ಅವರು “ಸರ್ಕಾರದ ಈ ಕ್ರಮದಿಂದ ಬೊಕ್ಕಸಕ್ಕೆ ಅನಗತ್ಯ ಹೊರೆಯಾಗಿದೆ. ಅಷ್ಟೇ ಅಲ್ಲದೆ, ಪ್ರತಿವಾದಿಗಳಾಗಿರುವ ಶಾಸಕರು ಲಾಭದಾಯಕ ಹುದ್ದೆ ಹೊಂದಿದ್ದು, ಅವರೆಲ್ಲಾ ತಮ್ಮ ಅಧಿಕಾರದಲ್ಲಿ ಮುಂದುವರೆಯುವುದು ಸಂವಿಧಾನಕ್ಕೆ ವಿರುದ್ಧವಾಗಿದೆ” ಎಂದರು.

ಇದಕ್ಕೆ ಪ್ರತಿಯಾಗಿ ಅಡ್ವೊಕೇಟ್‌ ಜನರಲ್‌ ಕೆ ಶಶಿಕಿರಣ ಶೆಟ್ಟಿ ಅವರು “ಅರ್ಜಿದಾರರು ಕೆಎಸ್‌ಪಿಸಿಬಿಯಲ್ಲಿ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು, ಮಂಡಳಿಯ ಅಧ್ಯಕ್ಷ ಸ್ಥಾನಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಆದರೆ, ಅಧ್ಯಕ್ಷ ಸ್ಥಾನ ದೊರೆತಿಲ್ಲ. ಈ ಕಾರಣದಿಂದ ಮತ್ತು ರಾಜಕೀಯ ದುರುದ್ದೇಶಗಳಿಂದ ಈ ಅರ್ಜಿ ಸಲ್ಲಿಸಿದ್ದಾರೆ. ಆದ್ದರಿಂದ, ಈ ಅರ್ಜಿ ವಿಚಾರಣೆಗೆ ಯೋಗ್ಯವಿಲ್ಲ” ಎಂದು ಆಕ್ಷೇಪಿಸಿದರು.

ಸುದೀರ್ಘ ವಾದ–ಪ್ರತಿವಾದ ಆಲಿಸಿದ ಪೀಠವು ಅರ್ಜಿಯಲ್ಲಿ ಸಾಂವಿಧಾನಿಕ ಮತ್ತು ಪ್ರಜಾಪ್ರಭುತ್ವದ ಪ್ರಾಮುಖ್ಯತೆಗೆ ಸಂಬಂಧಿಸಿದ ಅಂಶಗಳಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ. ಆದ್ದರಿಂದ, ಇದನ್ನು ವಿಸ್ತೃತವಾಗಿ ವಿಚಾರಣೆ ನಡೆಸಿ ಅರ್ಜಿದಾರರು ಎತ್ತಿರುವ ಎಲ್ಲ ಅಂಶಗಳಿಗೂ ಪರಿಹಾರ ಕಂಡುಕೊಳ್ಳಬೇಕಾಗಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿ ರಾಜ್ಯ ಸರ್ಕಾರ ಸಮಗ್ರ ಪ್ರತ್ಯುತ್ತರ ಸಲ್ಲಿಸುವಂತೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.

ಸಂಪುಟ ದರ್ಜೆ ಸ್ಥಾನಮಾನ ಹೊಂದಿರುವ ಪ್ರತಿವಾದಿ ಶಾಸಕರುಗಳಿಗೆ ಹ್ಯಾಂಡ್‌ ಸಮನ್ಸ್‌ ಜಾರಿಗೊಳಿಸಲು ಆದೇಶಿಸಿದ ಪೀಠವು ವಿಚಾರಣೆಯನ್ನು ಮಾರ್ಚ್‌ 27ಕ್ಕೆ ಮುಂದೂಡಿತು. ಅಂತೆಯೇ ಪ್ರತಿವಾದಿಗಳು ಮಾರ್ಚ್‌ 18ರೊಳಗೆ ಆಕ್ಷೇಪಣೆ ಸಲ್ಲಿಸಬೇಕು ಎಂದು ನಿರ್ದೇಶಿಸಿತು.