ಬೆಂಗಳೂರು: ಈ ಹಿಂದೆ ಬಿಜೆಪಿ ಅಧಿಕಾರದಲ್ಲಿದ್ದಾಗ ನಡೆದಿದೆಯೆನ್ನಲಾದ ಸಾವಿರಾರು ಕೋಟಿ ರೂ. ಕೋವಿಡ್ – 19 ಹಗರಣದ ತನಿಖೆಗಾಗಿ ಈಗಿನ ಕಾಂಗ್ರೆಸ್ ಸರ್ಕಾರ ನೇಮಿಸಿದ್ದ ನ್ಯಾ. ಮೈಕಲ್ ಡಿ ಕುನ್ಹಾ ಆಯೋಗವು ತನ್ನ ಮಧ್ಯಂತರ ವರದಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಿದೆ.
ವರದಿಯಲ್ಲಿ 918 ಕೋಟಿ ರೂ. ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖಿಸಲಾಗಿದೆ. ಈ ಸಂಬಂಧ ಇಂದು (ನವೆಂಬರ್ 14) ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ಚರ್ಚೆ ನಡೆಸಿದ್ದು, ಅಂತಿಮವಾಗಿ ಕೊವಿಡ್ ಹಗರಣದ ತನಿಖೆಗೆ ಎಸ್ಐಟಿ ರಚನೆ ಮಾಡಲು ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆ ಅಸ್ತು ಎಂದಿದೆ.
ಕೊವಿಡ್ ಹಗರಣದ ಸಂಬಂಧ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾಪವಾಗುತ್ತಿದ್ದಂತೆಯೇ ಯಡಿಯೂರಪ್ಪ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸುವಂತೆ ಸಚಿವರು ಆಗ್ರಹಿಸಿದ್ದಾರೆ ಎಂದು ತಿಳಿದುಬಂದಿದೆ. ಹೀಗಾಗಿ ಪ್ರಕರಣ ದಾಖಲಿಸಿ ತನಿಖೆ ನಡೆಸಲು ಎಸ್ಐಟಿ ಗೆ ವಹಿಸಲು ಕ್ಯಾಬಿನೆಟ್ ತೀರ್ಮಾನಿಸಿದೆ.