ರಾಮನಗರ: ಕ್ಯಾಂಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ.
ಮೃತರನ್ನು ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿ ಗ್ರಾಮದ ಶಿವಪ್ರಕಾಶ್, ಪುಟ್ಟಗೌರಮ್ಮ, ಶಿವರತ್ನ ಎಂದು ಗುರುತಿಸಲಾಗಿದೆ.ಇಂದು ಬೆಳಿಗ್ಗೆ 11 ಗಂಟೆ ಸುಮಾರಿಗೆ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೆಯ ಸರ್ವೀಸ್ ರಸ್ತೆಯಲ್ಲಿ ಈ ಅವಘಡ ಸಂಭವಿಸಿದೆ. ಮಾರುತಿ 800 ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿದ್ದು, ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮಹಿಳೆಯರು ಸೇರಿ ಓರ್ವ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಕ್ಯಾಂಟರ್ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ಜಖಂಗೊಂಡಿದ್ದು, ಕಾರಿನಲ್ಲಿದ್ದ ಐವರ ಪೈಕಿ ಮೂವರು ಸಾವನ್ನಪ್ಪಿದ್ದಾರೆ. ಘಟನಾ ಸ್ಥಳಕ್ಕೆ ಚನ್ನಪಟ್ಟಣ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದೆ.
ಚನ್ನಪಟ್ಟಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.