ಮೈಸೂರು: ಈ ಬಾರಿಯ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮ ನವೆಂಬರ್ 1ರಂದು ನಗರದ ಓವೆಲ್ ಮೈದಾನದಲ್ಲಿ ಅದ್ದೂರಿಯಾಗಿ ಜರುಗಲಿದ್ದು,ಅಧಿಕಾರಿಗಳು, ಕನ್ನಡ ಚಳುನಳಿಗಾರರು,ಶಾಲಾ ಕಾಲೇಜು ವಿದ್ಯಾರ್ಥಿಗಳು ಕೈ ಜೋಡಿಸಬೇಕೆಂದು ಜಿಲ್ಲಾಧಿಕಾರಿಗಳಾದ ಡಾ. ಕೆ ವಿ ರಾಜೇಂದ್ರ ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕನ್ನಡ ರಾಜ್ಯೋತ್ಸವ ಆಚರಣೆಯಲ್ಲಿ ಶಾಲಾ,ಕಾಲೇಜುಗಳ ಮಕ್ಕಳ ಭಾಗವಹಿಸುವಿಕೆಗೆ ಹೆಚ್ಚು ಪ್ರೋತ್ಸಾಹ ನೀಡಿ ಏಕೆಂದರೆ ಮುಂದಿನ ದಿನಗಳಲ್ಲಿ ಕನ್ನಡವನ್ನು ಉಳಿಸಿ ಬೆಳೆಸುವ ಜವಾಬ್ದಾರಿ ನಮ್ಮ ಮುಂದಿನ ಪೀಳಿಗೆಗೆ ಇರುವುದರಿಂದ, ಕನ್ನಡ ರಾಜ್ಯೋತ್ಸವ ಹಾಗೂ ಸಂಬಂಧಿತ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಹೆಚ್ಚು ಅವಕಾಶ ಕಲ್ಪಿಸಿ ಎಂದು ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಕರ್ನಾಟಕ ರಾಜ್ಯೋತ್ಸವ ದಿನಾಚರಣೆ ಪ್ರಯುಕ್ತ ನವೆಂಬರ್ 1 ರಂದು ಬೆಳಿಗ್ಗೆ 8.30ಕ್ಕೆ ಅರಮನೆ ಆವರಣದಲ್ಲಿರುವ ಶ್ರೀ ಭುವನೇಶ್ವರಿ ದೇವಿಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪನವರು ಪೂಜೆ ಸಲ್ಲಿಸಿ, ನಂತರ ನಗರದ ಓವೆಲ್ ಗ್ರೌಂಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸುವರು. ಇದೇ ಸಂದರ್ಭದಲ್ಲಿ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದಿಂದ ಕಲಾತಂಡಗಳು ಹಾಗೂ ಸ್ತಬ್ಧ ಚಿತ್ರಗಳು ಮೆರವಣಿಗೆ ಹೊರಟು ಕೆ.ಆರ್ ಸರ್ಕಲ್ ವೃತ್ತದಿಂದ ದೇವರಾಜ ಅರಸು ರಸ್ತೆ ಮಾರ್ಗವಾಗಿ ಹಳೆ ಜಿಲ್ಲಾಧಿಕಾರಿಗಳ ಕಚೇರಿಯಿಂದ ಸಾಗಿ ಓವೆಲ್ ಮೈದಾನ ತಲುಪುವುದು ಎಂದು ಮಾಹಿತಿ ನೀಡಿದರು.
ಕಾರ್ಯಕ್ರಮದಲ್ಲಿ ಕನ್ನಡ ನಾಡಿನ ಹಿರಿಮೆ ಸಾರುವ ಹಾಡು,ಗೀತೆಗಳು,ಸ್ತಬ್ದ ಚಿತ್ರಗಳು,ಕಲಾತಂಡಗಳು ನಾಡಿನ ಸಾಂಸ್ಕ್ೃತಿಕ ವೈಭವವನ್ನು ಅನಾವರರಣಗೊಳಿಸಬೇಕು.ಶಿಸ್ತುಬದ್ಧ ಪೆರೇಡ್ ನಡೆಯಲಿ ಜಿಲ್ಲಾಮಟ್ಟದಲ್ಲಿ ಸಾಧನೆ ಮಾಡಿದ ಗೌರವಾನ್ವಿತರಿಗೆ ಸನ್ಮಾನ ಕಾರ್ಯಕ್ರಮ ಕಳೆದ ಶೈಕ್ಷಣಿಕ ಸಾಲಿನಲ್ಲಿ ಶೇ. ನೂರರಷ್ಟು ಫಲಿತಾಂಶ ಪಡೆದ ಆಯ್ದ ಗ್ರಾಮೀಣ ಸರ್ಕಾರಿ ಶಾಲೆಗಳಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು. ಸಂಜೆ 6 ಗಂಟೆಗೆ ನಗರದ ಕಲಾಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಕನ್ನಡ ರಾಜ್ಯೋತ್ಸವ ಆಚರಣೆಗೆ ಎಲ್ಲಾ ಸರ್ಕಾರಿ ನೌಕರರು ಕಡ್ಡಾಯವಾಗಿ ಹಾಜರಾಗಬೇಕು ಎಂದು ತಿಳಿಸಿದರು.
ಕನ್ನಡಪರ ಹೋರಾಟಗಾರರಾದ ಅರವಿಂದ್ ಶರ್ಮ ರವರು ಮಾತನಾಡಿ, ನಗರದ ಪ್ರೇಕ್ಷಣೀಯ ಸ್ಥಳಗಳಲ್ಲಿ ಫಲಕಗಳು ಆಂಗ್ಲ ಭಾಷೆಯಿಂದ ಕೂಡಿದ್ದು, ಕನ್ನಡಕ್ಕೆ ಮೊದಲ ಆದ್ಯತೆ ನೀಡಬೇಕು. ಈಗಾಗಲೇ ಕನ್ನಡದಲ್ಲಿರುವ ಫಲಕಗಳು ನಶಿಸುತ್ತಿದ್ದಲ್ಲಿ ಅವುಗಳನ್ನು ಪುನಶ್ಚೇತನಗೊಳಿಸಬೇಕು ಎಂದು ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿಗಳು ಮೊದಲಿಗೆ ಜನಸಂದಣಿ ಇರುವ ಮೈಸೂರಿನ10 ಜಾಗಗಳಲ್ಲಿ ಕನ್ನಡದ ಸೂಚನಾ/ ನಾಮಫಲಕಗಳನ್ನು ಕಡ್ಡಾಯವಾಗಿ ಹಾಕಿಸುವಂತೆ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತಾರಾದ ಆಶಾದ್ ಉರ್ ರೆಹಮಾನ್ ಶರೀಫ್ ಅವರಿಗೆ ಸೂಚನೆ ನೀಡಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿಗಳಾದ ಪಿ ಶಿವರಾಜು, ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಾದ ಆಶಾದ್ ಉರ್ ರೆಹಮಾನ್ ಶರೀಫ್, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ದಿನೇಶ್ ಕುಮಾರ್, ರಂಗಾಯಣದ ಜಂಟಿ ನಿರ್ದೇಶಕರಾದ ನಿರ್ಮಲ ಮಠಪತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕರಾದ ವಿ.ಎನ್ ಮಲ್ಲಿಕಾರ್ಜುನ ಸ್ವಾಮಿ, ಸಹಾಯಕ ನಿರ್ದೇಶಕರಾದ ಡಾ. ಎಂ ಡಿ ಸುದರ್ಶನ್, ಕನ್ನಡ ಸಾಹಿತ್ಯ ಪರಿಷತ್ತಿನ ಜಿಲ್ಲಾಧ್ಯಕ್ಷರಾದ ಮಡ್ಡಿಕೆರೆ ಗೋಪಾಲ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ಜೆ. ಗೋವಿಂದರಾಜು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳಿಂದ ಕನ್ನಡ ಪರ ಹೋರಾಟಗಾರರು ಭಾಗವಹಿಸಿದ್ದರು.