ಬೆಂಗಳೂರು: ರಾಜ್ಯದ ತಂಬಾಕು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದ ನಿಯೋಗ ಮಾಡಿದ್ದ ಮನವಿಗೆ ಕೇಂದ್ರ ಸರಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ.
ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ನಿಖಿಲ್ ಅವರು, ಹುಣಸೂರು, ಪಿರಿಯಾಪಟ್ಟಣ, ಹೆಚ್.ಡಿ.ಕೋಟೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಬೆಳೆಯಲಾಗಿರುವ ಪರವಾನಗಿ ರಹಿತ ತಂಬಾಕು ಬೆಳೆಗಾರರಿಗೂ ಮಾರಾಟಕ್ಕೆ ಅವಕಾಶ ನೀಡಿಕೆ ಹಾಗೂ ಆ ಬೆಳೆಗಾರರಿಗೆ ವಿಧಿಸಲಾಗುತ್ತಿದ್ದ ದಂಡ ಮನ್ನಾ ಮಾಡುವ ನಿರ್ಧಾರ ಕೈಗೊಂಡಿರುವ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಖಾತೆ ಸಚಿವರಾದ ಪಿಯೂಷ್ ಗೋಯಲ್ ಅವರಿಗೆ ಧನ್ಯವಾದ ಹೇಳಿದ್ದಾರೆ.
ಕೇಂದ್ರದ ಆದೇಶದ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಅವರು; ಕಳೆದ 2024 ಡಿಸೆಂಬರ್ 2ರಂದು ನವದೆಹಲಿಯಲ್ಲಿ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಕೇಂದ್ರದ ವಾಣಿಜ್ಯ ಮತ್ತು ಕೈಗಾರಿಕೆ ಸಚಿವರಾದ ಪಿಯೂಷ್ ಗೋಯಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಗಿತ್ತು. ಡಿಸೆಂಬರ್ 21ರಂದು ವಾಣಿಜ್ಯ ಇಲಾಖೆಯ ಉನ್ನತ ಅಧಿಕಾರಿಗಳ ಜತೆ ಮಹತ್ವದ ಸಭೆಯನ್ನು ನಡೆಸಲಾಗಿತ್ತು ಎಂದು ತಿಳಿಸಿದ್ದಾರೆ.
ಅಂದು ಸಚಿವರನ್ನು ಭೇಟಿ ಮಾಡಿದ ನಿಯೋಗದಲ್ಲಿ ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಚಿವರಾದ ಸಾ.ರಾ.ಮಹೇಶ್, ಹುಣಸೂರು ಶಾಸಕ ಜಿ.ಟಿ.ಹರೀಶ್ ಗೌಡ ತಂಬಾಕು ಬೆಳೆಗಾರರು ಜತೆಯಲಿದ್ದರು ಎಂಬುದನ್ನು ನಿಖಿಲ್ ಅವರು ತಿಳಿಸಿದ್ದಾರೆ.