ಮನೆ ಮಠ ಶ್ರವಣಬೆಳಗೊಳ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

ಶ್ರವಣಬೆಳಗೊಳ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ವಿಧಿವಶ

0

ಹಾಸನ: ಜೈನರ ಪವಿತ್ರ ಕ್ಷೇತ್ರಗಳಲ್ಲಿ ಒಂದಾಗಿರುವ ಜಿಲ್ಲೆಯ ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ (75) ವಿಧಿವಶರಾಗಿದ್ದಾರೆ.

ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆ ಬೆಳ್ಳೂರು ಆದಿಚುಂಚನಗಿರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ನಿಧನರಾಗಿದ್ದಾರೆ.

ಅನಾರೋಗ್ಯದ ಹಿನ್ನೆಲೆ ಅವರನ್ನು ಆಂಬುಲೆನ್ಸ್ ಮೂಲಕ ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ ಬೆಳ್ಳೂರು ಆಸ್ಪತ್ರೆಗೆ ಭೇಟಿ ನೀಡಿದರು.

ಸ್ವಸ್ಥಿಶ್ರೀ ಚಾರುಕೀರ್ತಿ ಅನ್ನುವ ಬಿರುದಾಂಕಿತ ಜೈನಭಟ್ಟಾರಕ ಸ್ವಾಮೀಜಿ ದೇಶದಾದ್ಯಂತ ಅಪಾರ ಭಕ್ತ ವರ್ಗವನ್ನು ಹೊಂದಿದ್ದಾರೆ.

ಮಧ್ಯಾಹ್ನ 12 ಗಂಟೆಯ ಹೊತ್ತಿಗೆ ಶ್ರೀಗಳ ಪಾರ್ಥಿವ ಶರೀರವನ್ನು ಮಠಕ್ಕೆ ತರಲಾಗುತ್ತಿದ್ದು, ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.

ಅವರ ಶಿಷ್ಯರಾದ ಹೊಂಬುಜ ಮಠ, ಕನಕಗಿರಿ ಕ್ಷೇತ್ರ, ಸೋಂದಾ ಕ್ಷೇತ್ರ, ಕಂಬದಹಳ್ಳಿ ಕ್ಷೇತ್ರ, ತಮಿಳುನಾಡಿನ ಅರಹಂತಗಿರಿ, ಮೂಡುಬಿದಿರೆಯ ಜೈನ ಮಠ, ಕಾರ್ಕಳದ ಜೈನ ಮಠ ಪೀಠಾಧಿಪತಿಗಳು ಕ್ಷೇತ್ರಕ್ಕೆ ಬರಲಿದ್ದಾರೆ.

ನಂತರ ಮುಂದಿನ ವಿಧಿವಿಧಾನಗಳ ಬಗ್ಗೆ ಶ್ರೀಗಳು ಚರ್ಚಿಸಲಿದ್ದು, ಅಂತಿಮ ವಿಧಿವಿಧಾನದ ಸಮಯ ನಿಗದಿಪಡಿಸಲಾಗುವುದು.

ದಿಗಂಬರ ಜೈನ ಸಂಪ್ರದಾಯದಂತೆ ಅಂತಿ ವಿಧಿ ವಿಧಾನ ನೆರವೇರಲಿವೆ ಎಂದು ಮಠದ ಮೂಲಗಳು ತಿಳಿಸಿವೆ.

ಸಿಎಂ ಸಂತಾಪ: ಶ್ರೀ ಕ್ಷೇತ್ರ ಶ್ರವಣಬೆಳಗೊಳದ ಪರಮಪೂಜ್ಯ ಜಗದ್ಗುರು ಕರ್ಮಯೋಗಿ ಸ್ವಸ್ತಿಶ್ರೀ ಚಾರುಕೀರ್ತಿ ಭಟ್ಟಾರಕ ಪಟ್ಟಾಚಾರ್ಯ ಮಹಾಸ್ವಾಮೀಜಿಗಳು ನಮ್ಮನ್ನಗಲಿದ ಸುದ್ದಿ ತಿಳಿದು ಅತ್ಯಂತ ದುಃಖವಾಯಿತು. ಪೂಜ್ಯರ ಅಗಲಿಕೆಯಿಂದ ನಾಡಿಗೆ ತುಂಬಲಾರದ ನಷ್ಟವಾಗಿದ್ದು, ಅವರ ಆತ್ಮಕ್ಕೆ ಸದ್ಗತಿ ಕೋರುತ್ತೇನೆ. ಅವರ ಅಪಾರ ಸಂಖ್ಯೆಯ ಭಕ್ತರಿಗೆ ಈ ನೋವನ್ನು ಸಹಿಸಿಕೊಳ್ಳುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುವುದಾಗಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯ ಸಂತಾಪ: ಶ್ರೀ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ವಿಧಿವಶರಾದ ಸುದ್ದಿ ತಿಳಿದು ಅತೀವ ನೋವಾಯಿತು. ಧಾರ್ಮಿಕ ಚಟುವಟಿಕೆಗಳ ಜೊತೆ ಶಿಕ್ಷಣ, ಸಮಾಜ ಸುಧಾರಣೆಗಾಗಿ ದುಡಿಯುತ್ತಿದ್ದ ಶ್ರೀಗಳ ಅಗಲಿಕೆಯಿಂದ ಸಮಾಜ ಬಡವಾಗಿದೆ. ಶ್ರೀಗಳ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಮಠದ ಅನುಯಾಯಿಗಳಿಗೆ ದೇವರು ಕರುಣಿಸಲಿ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟ್ವೀಟ್ ನಲ್ಲಿ ತಿಳಿಸಿದ್ದಾರೆ.

ಹಿಂದಿನ ಲೇಖನಮೈಸೂರಿನ ಪ್ರಾದೇಶಿಕ ಶಿಕ್ಷಣ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಮುಂದಿನ ಲೇಖನ‘ಮೋದಿ’ ಉಪನಾಮ ಕುರಿತು ಅಪಮಾನ: ರಾಹುಲ್ ಗಾಂಧಿ ತಪ್ಪಿತಸ್ಥ