ಬೆಳಗಾವಿ: ವೈದ್ಯರ ನಿರ್ಲಕ್ಷ್ಯಕ್ಕೆ ಬಾಣಂತಿ, ಮಗು ಮೃತಪಟ್ಟ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ಬೆಳಗಾವಿ ತಾಲೂಕಿನ ಸಂತಿಬಸ್ತವಾಡ ಗ್ರಾಮದ ಲಕ್ಷ್ಮೀ ಹಳ್ಳಿ( 28) ಮೃತ ಬಾಣಂತಿ.
ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಮಗು ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ. ಇನ್ನು ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
ಲಕ್ಷ್ಮೀಗೆ ಹೆರಿಗೆ ನೋವು ಕಾಣಿಸಿಕೊಂಡ ಹಿನ್ನೆಲೆ ತಡರಾತ್ರಿ ಬೆಳಗಾವಿ ತಾಲೂಕಿನ ಕಿಣೆಯ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಲಕ್ಷ್ಮೀ ಬೆಳಗ್ಗೆ ಕಿಣೆಯ ಆಸ್ಪತ್ರೆಯಲ್ಲಿಯೇ ಹೆಣ್ಣು ಮಗುವಿಗೆ ಜನ್ಮನೀಡಿದ್ದರು. ಈ ವೇಳೆ ತೀವ್ರ ರಕ್ತಸ್ರಾವವಾದ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಗೆ ಸಾಗಿಸಲು ವೈದ್ಯರು ಸಲಹೆ ನೀಡಿದ್ದರು. ವೈದ್ಯರ ಸಲಹೆ ಮೇರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಬಾಣಂತಿ, ಮಗು ಮೃತಪಟ್ಟಿದೆ.
ಬೆಳಗ್ಗೆ ಆಸ್ಪತ್ರೆಯಲ್ಲಿ ನಾರ್ಮಲ್ ಡಿಲೆವರಿ ಆದರೂ ಸೂಕ್ತ ಚಿಕಿತ್ಸೆ ನೀಡಿಲ್ಲ ಎಂದು ಕುಟುಂಬಸ್ಥರು ಆರೋಪ ಮಾಡಿದ್ದಾರೆ.
ವೈದ್ಯರು ಸರಿಯಾದ ಸಮಯಕ್ಕೆ ಚಿಕಿತ್ಸೆ ನೀಡಿಲ್ಲ, ರಕ್ತಸ್ರಾವ ಆದರೂ ಗಮನಕ್ಕೆ ತರದೇ ನಿರ್ಲಕ್ಷ್ಯ ವಹಿಸಿದ್ದಾರೆ. ಆಸ್ಪತ್ರೆಗೆ ಸಾಗಿಸಲು ಸರಿಯಾದ ಸಮಯಕ್ಕೆ ಆ್ಯಂಬುಲೆನ್ಸ್ ವ್ಯವಸ್ಥೆ ಮಾಡದೆ ಬೇಜವಾಬ್ದಾರಿತನ ಮೆರೆದಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ಬಾಣಂತಿ, ಮಗು ಸಾವಾಗಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದು, ನಿರ್ಲಕ್ಷ್ಯ ವಹಿಸಿದ ವೈದ್ಯರ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಈ ಘಟನೆ ಸಂಬಂಧ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.