ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಮತ್ತಿತರರ ವಿರುದ್ಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಲೋಕಾಯುಕ್ತ ತನಿಖಾಧಿಕಾರಿ ಹಾಜರಾಗಿ ಶೋಕಾಸ್ ನೋಟಿಸ್‌ಗೆ ವಿವರಣೆ ಸಲ್ಲಿಸಿದ್ದಾರೆ.
ತನಿಖಾ ಪ್ರಗತಿ ವಿವರವನ್ನು ಸಲ್ಲಿಸದ್ದಕ್ಕೆ ಕೋರ್ಟ್ ಅಸಮಾಧಾನ ವ್ಯಕ್ತಪಡಿ ಸಿದೆ. ಪ್ರತಿ ಬಾರಿಯೂ ಕೋರ್ಟ್ ವಿಚಾರಣೆ ವೇಳೆ ಶೆಲ್ ಕಂಪನಿಗಳ ವಿರುದ್ಧ ತನಿಖೆ ನಡೆಸಿರುವುದಾಗಿ ಹೇಳಿ 2 ವರ್ಷಗಳಾದರೂ ಪೊಲೀಸರು ತನಿಖೆ ಪೂರ್ಣಗೊಳಿಸದ ಹಿನ್ನೆಲೆ ತನಿಖಾಧಿಕಾರಿ ಬಗ್ಗೆ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5ಕ್ಕೆ ಮುಂದೂಡಿದೆ.
ಏನಿದು ಪ್ರಕರಣ? : ಅಧಿಕಾರ ದುರ್ಬಳಕೆ ಮಾಡಿಕೊಂಡು ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವಸತಿ ಯೋಜನೆ ಗುತ್ತಿಗೆ ನೀಡುವ ಸಲುವಾಗಿ ರಾಮಲಿಂಗಂ ಕನಸ್ಟ್ರಕ್ಷನ್ ಕಂಪನಿಯಿಂದ ಕೋಟ್ಯಂತರ ರೂ. ನಗದು ಮತ್ತು ಶೆಲ್ ಕಂಪನಿಗಳ ಮೂಲಕ ಲಂಚ ಪಡೆದಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.
ಇದಕ್ಕೆ ಸಂಬಂಧಿಸಿದಂತೆ ಬಿ.ಎಸ್.ಯಡಿಯೂ ರಪ್ಪ, ಬಿ.ವೈ.ವಿಜಯೇಂದ್ರ, ಶಶಿಧರ ಮರಡಿ, ಸಂಜಯ್ ಶ್ರೀ, ಚಂದ್ರಕಾಂತ ರಾಮಲಿಂಗಂ, ಎಸ್.ಟಿ.ಸೋಮಶೇಖರ್, ಡಾ.ಜಿ.ಸಿ.ಪ್ರಕಾಶ್, ಕೆ.ರವಿ, ವಿರೂಪಾಕ್ಷಪ್ಪ ಯಮಕನಮರಡಿ ವಿರುದ್ಧ ಸಾಮಾಜಿಕ ಕಾರ್ಯಕರ್ತ ಟಿ.ಜೆ.ಅಬ್ರಹಾಂ ಖಾಸಗಿ ದೂರು ದಾಖಲಿಸಿದ್ದರು. ಯಡಿಯೂರಪ್ಪ ಹಾಗೂ ಇತರರ ವಿರುದ್ಧ ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಲೋಕಾಯುಕ್ತ ಪೊಲೀಸರಿಗೆ 2022ರಲ್ಲಿ ಆದೇಶಿಸಿತ್ತು.