ಮನೆ ರಾಜ್ಯ ಜ.೨೯ ರಂದು ನಂಜನಗೂಡಿಗೆ ಸಿಎಂ: ಸಂಸದ ಶ್ರೀನಿವಾಸ್ ಪ್ರಸಾದ್

ಜ.೨೯ ರಂದು ನಂಜನಗೂಡಿಗೆ ಸಿಎಂ: ಸಂಸದ ಶ್ರೀನಿವಾಸ್ ಪ್ರಸಾದ್

0

ಮೈಸೂರು(Mysuru): ಭಾರತ ಸರ್ಕಾರದ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ವತಿಯಿಂದ ಆಯೋಜಿಸಿರುವ ವಿಕಲಚೇತನರಿಗೆ ಸಾಧನ ಸಲಕರಣೆ ವಿತರಣಾ ಸಮಾರಂಭದ ಉದ್ಘಾಟನೆಗೆ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ ಆಗಮಿಸುತ್ತಿದ್ದಾರೆ ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀನಿವಾಸ್ ಪ್ರಸಾದ್ ತಿಳಿಸಿದರು.

ಇಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಕಾರ್ಯಕ್ರಮವನ್ನು ತಾಲ್ಲೂಕು ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಾಗಿದೆ. ಅಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ನಾಲ್ಕು ವಿಧಾನ ಸಭಾ ಕ್ಷೇತ್ರಗಳಾದ ವರುಣಾ, ಟಿ.ನರಸೀಪುರ ನಂಜನಗೂಡು ಹಾಗೂ ಹೆಚ್.ಡಿ.ಕೋಟೆ ವ್ಯಾಪ್ತಿಯ ವಿಕಲಚೇತನರಿಗೆ ಅಗತ್ಯ ಸಾಧನ ಸಲಕರಣೆಗಳನ್ನು ವಿತರಣೆ ಮಾಡಲಾಗುವುದು. ಈಗಾಗಲೇ ಇದೇ ರೀತಿಯ ಒಂದು ಕಾರ್ಯಕ್ರಮವನ್ನು ಚಾಮರಾಜನಗರ ಜಿಲ್ಲೆಯ ೪ ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಚಾಮರಾಜನಗರದಲ್ಲಿ ಯಶಸ್ವಿಯಾಗಿ ನಿರ್ವಹಿಸಿ ೧೬೯೩ ವಿಕಲಚೇತನರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಗಿದೆ ಎಂದರು.

ದೇಶದಲ್ಲಿ ೬೮ ಲೋಕಸಭಾ ಕ್ಷೇತ್ರಗಳನ್ನು ಈ ವಿಶೇಷ ಸೌಲಭ್ಯಕ್ಕೆ ಆಯ್ಕೆ ಮಾಡಲಾಗಿದೆ. ಕರ್ನಾಟಕದಿಂದ ಆಯ್ಕೆಯಾಗಿರುವ ಏಕೈಕ ಲೋಕಸಭಾ ಕ್ಷೇತ್ರ ಚಾಮರಾಜನಗರ. ಈಗಾಗಲೇ ಫಲಾನುಭವಿಗಳನ್ನು ಗುರುತಿಸಲಾಗಿದೆ. ೧೪೯೯ ಪಲಾನುಭವಿಗಳು ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿದ್ದು, ಫಲಾನುಭವಿಗಳನ್ನು ಕರೆತರುವ ಹಾಗೂ ಕರೆದುಕೊಂಡು ಹೋಗುವ ಜವಬ್ದಾರಿಯನ್ನು ಗ್ರಾಮ ಪಂಚಾಯತ್ ಅಭಿವೃದ್ದಿ  ಅಧಿಕಾರಿಗಳು ತೆಗೆದುಕೊಳ್ಳಬೇಕು. ಈ ಮೂಲಕ ಅಧಿಕಾರಿಗಳು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ತಿಳಿಸಿದರು.

ಜಿಲ್ಲಾಧಿಕಾರಿಗಳಾದ ಡಾ.ಕೆ.ವಿ.ರಾಜೇಂದ್ರ ಅವರು ಮಾತನಾಡಿ ಇದು ವಿಶೇಷವಾದ ಕಾರ್ಯಕ್ರಮ. ವಿಕಲಚೇತನರನ್ನು ಕಾರ್ಯಕ್ರಮಕ್ಕೆ ಕರೆದುಕೊಂಡು ಬಂದು ಕಾರ್ಯಕ್ರಮದ ನಂತರ ಅವರನ್ನು ಕರೆದುಕೊಂಡು ಹೋಗಿ ಬಿಡುವ ಕಾರ್ಯವನ್ನು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ನಿರ್ವಹಿಸಬೇಕು. ಇದಕ್ಕಾಗಿ ಜಿಲ್ಲಾಪಂಚಾಯತ್‌ನಲ್ಲಿ ವಿಕಲಚೇತನರಿಗೆ ಮೀಸಲಿರುವ ಶೇ ೫ ಅನುದಾನವನ್ನು ಬಳಸಿಕೊಳ್ಳಿ. ಕಾರ್ಯಕ್ರಮದಲ್ಲಿ ವಿಕಲಚೇತನರ ಸಾದನ ಸಲಕರಣೆಗಳ ಯಶಸ್ವಿ ವಿತರಣೆಗೆ ವಿವಿಧ ಕೌಂಟರ್‌ಗಳನ್ನು ತೆರೆದು ಮಾಹಿತಿಯನ್ನು ಪ್ರದರ್ಶಿಸುವುದು ಹಾಗೂ ವಿವಿಧ ಇಲಾಖೆಗಳು ತಮ್ಮ ಇಲಾಖೆಗಳಲ್ಲಿ ಲಭ್ಯವಿರುವ ಯೋಜನೆಗಳ ಸ್ಟಾಲ್‌ಗಳನ್ನು ತೆರೆಯಿರಿ ಎಂದರು.

ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಡಾ.ಪೂರ್ಣಿಮಾ. ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಪ್ರೇಮ್ ಕುಮಾರ್, ಕೃಷ್ಣಂರಾಜು ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಹಿಂದಿನ ಲೇಖನಹಾಸ್ಯ
ಮುಂದಿನ ಲೇಖನಕೋವಿಡ್ 19 ಲಸಿಕೆಯಿಂದ “ಹಲವು ಅಡ್ಡ ಪರಿಣಾಮ”: ಆರ್’ಟಿಐ ನಲ್ಲಿ ಕೇಂದ್ರದ ಉತ್ತರ ಬಹಿರಂಗ