ಬೆಂಗಳೂರು: ”ಒಳಮೀಸಲಾತಿ ಜಾರಿ ವಿಚಾರದಲ್ಲಿ ನಾನು ಬದ್ಧನಾಗಿದ್ದೇನೆ. ಈ ಕುರಿತು ಹೈಕಮಾಂಡ್ ಮಟ್ಟದಲ್ಲಿ ಚರ್ಚೆ ನಡೆಸಿ, ನಂತರ ಸಂಪುಟ ಸಭೆಯಲ್ಲಿ ಚರ್ಚಿಸುವ ಮೂಲಕ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಒಳಮೀಸಲಾತಿ ಜಾರಿ ಕುರಿತು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ನಡೆಸಲಾಯಿತು. ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ಹಾಗೂ ಅಬಕಾರಿ ಸಚಿವರಾದ ಆರ್.ಬಿ. ತಿಮ್ಮಾಪುರ ಉಪಸ್ಥಿತಿಯಲ್ಲಿ ಮಾದಿಗ ಸಮುದಾಯದ ಮಾಜಿ ಸಚಿವರು, ಶಾಸಕರು ಸಮ್ಮುಖದಲ್ಲಿ ಸಭೆ ನಡೆಸಿ, ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಯಿತು.
ಸಭೆಯಲ್ಲಿ ಮಾಜಿ ಸಚಿವ ಹೆಚ್. ಆಂಜನೇಯ, ಮಾಜಿ ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ, ಶಾಸಕರಾದ ಎನ್. ಶ್ರೀನಿವಾಸ, ಬಸವಂತಪ್ಪ, ಡಾ. ತಿಮ್ಮಯ್ಯ ಶಿವಣ್ಣ ಹಾಗೂ ಸಮುದಾಯದ ಇತರ ಮುಖಂಡರು ಉಪಸ್ಥಿತರಿದ್ದರು.