ಚೆನ್ನೈ : ಡಿಸಿಎಂ ಡಿಕೆ ಶಿವಕುಮಾರ್ ಶೀಘ್ರವೇ ಗುದ್ದಲಿ ಪೂಜೆ ಮಾಡಲಾಗುವುದು ಎಂದು ಹೇಳಿದ ಬೆನ್ನಲ್ಲೇ ಮೇಕೆದಾಟು ಯೋಜನೆ ವಿರುದ್ಧ ಕಾನೂನು ಹೋರಾಟ ಮುಂದುವರಿಸಲು ಸಿಎಂ ಜೋಸೆಫ್ ವಿಜಯ್ ಖಡಕ್ ಸೂಚನೆ ನೀಡಿದ್ದಾರೆ. ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು ಜಲಾಶಯ ಯೋಜನೆಯನ್ನು ಯಾವುದೇ ಕಾರಣಕ್ಕೂ ಅನುಷ್ಠಾನಕ್ಕೆ ತರಲು ಬಿಡಬಾರದು ಎಂದು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ.
ಮೇಕೆದಾಟು ವಿರುದ್ಧದ ಕಾನೂನು ಹೋರಾಟವನ್ನು ತ್ವರಿತಗತಿಯಲ್ಲಿ ಮುಂದುವರಿಸುವಂತೆ ಹಾಗೂ ರಾಜ್ಯದ ನೀರಾವರಿ ಹಕ್ಕುಗಳನ್ನು ರಕ್ಷಿಸುವಲ್ಲಿ ಯಾವುದೇ ರಾಜಿ ಮಾಡಿಕೊಳ್ಳದಂತೆ ಅವರು ನಿರ್ದೇಶನ ನೀಡಿದ್ದಾರೆ. ಚೆನ್ನೈನಲ್ಲಿ ಕಾವೇರಿ ಜಲವಿವಾದ ಮತ್ತು ಕಾನೂನು ತಜ್ಞರೊಂದಿಗೆ ಉನ್ನತ ಮಟ್ಟದ ತುರ್ತು ಸಭೆ ನಡೆಸಿದ ವಿಜಯ್, ಜಲ ವಿವಾದದ ಇತಿಹಾಸ, ಹಾಲಿ ನೀರು ಹಂಚಿಕೆ ಪ್ರಕ್ರಿಯೆ ಮತ್ತು ಮೇಕೆದಾಟು ಆಣೆಕಟ್ಟು ನಿರ್ಮಾಣ ಮಾಡಲು ಕರ್ನಾಟಕ ಸರ್ಕಾರ ನಡೆಸುತ್ತಿರುವ ಪ್ರಸ್ತಾಪಗಳ ಬಗ್ಗೆ ಸುದೀರ್ಘ ಮಾಹಿತಿ ಪಡೆದುಕೊಂಡರು. ಈ ಸಭೆಯ ವೇಳೆ ಕಾನೂನು ತಜ್ಞರು ಸುಪ್ರೀಂ ಕೋರ್ಟ್‌ನಲ್ಲಿ ಮೇಕೆದಾಟು ಜಲವಿವಾದಕ್ಕೆ ಸಂಬಂಧಿಸಿದಂತೆ ನಡೆದಿರುವ ಇತ್ತೀಚಿನ ಬೆಳವಣಿಗೆಗಳನ್ನು ಮುಖ್ಯಮಂತ್ರಿಗಳ ಗಮನಕ್ಕೆ ತಂದಿದ್ದಾರೆ.


















