ಮನೆ ರಾಜಕೀಯ ಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸಿ, ಸಂಪುಟದಿಂದ ವಜಾ ಮಾಡಿ: ಕಾಂಗ್ರೆಸ್ ನಾಯಕರ ಆಗ್ರಹ

ಸಚಿವ ಈಶ್ವರಪ್ಪ ವಿರುದ್ಧ ಎಫ್ಐಆರ್ ದಾಖಲಿಸಿ ಬಂಧಿಸಿ, ಸಂಪುಟದಿಂದ ವಜಾ ಮಾಡಿ: ಕಾಂಗ್ರೆಸ್ ನಾಯಕರ ಆಗ್ರಹ

0

ಬೆಂಗಳೂರು:  ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಈಶ್ವರಪ್ಪನವರು ನೇರ ಕಾರಣ, ಹೀಗಾಗಿ ಅವರ ವಿರುದ್ಧ ಹತ್ಯೆ ಕೇಸು ದಾಖಲಿಸಿ ಬಂಧಿಸಬೇಕು ಎಂದು ಪ್ರತಿಪಕ್ಷ ಕಾಂಗ್ರೆಸ್ ಆಗ್ರಹ ಮಾಡಿದೆ.

ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ವಿರುದ್ಧ 40% ಕಮಿಷನ್ ಆರೋಪ ಮಾಡಿದ್ದ ಬಿಜೆಪಿ ಕಾರ್ಯಕರ್ತ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ವಿಷಯ ಹೊರಬರುತ್ತಿದ್ದಂತೆ ಬೆಂಗಳೂರಿನಲ್ಲಿ ಜಂಟಿ ಸುದ್ದಿಗೋಷ್ಠಿ ನಡೆಸಿದ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ, ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಸಚಿವ ಈಶ್ವರಪ್ಪನವರು ರಾಜೀನಾಮೆ ನೀಡಬೇಕು, ಸಿಎಂ ಬೊಮ್ಮಾಯಿ ಅವರು ಸಂಪುಟದಿಂದ ವಜಾ ಮಾಡಬೇಕು, ಇಲ್ಲದಿದ್ದರೆ ಮುಖ್ಯಮಂತ್ರಿಗಳ ನಿವಾಸಕ್ಕೆ ಘೇರಾವ್ ಹಾಕಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

ಸಚಿವ ಈಶ್ವರಪ್ಪ ವಿರುದ್ಧ ಕಾಂಗ್ರೆಸ್ ನಾಯಕರು ಕೆಂಡಮಂಡಲರಾಗಿದ್ದು, ಸಾಲು ಸಾಲು ಆರೋಪ ಮಾಡಿದ್ದಾರೆ. ಸಚಿವ. ಪ್ರತಿಯೊಬ್ಬರಿಗೂ ಇದು ಕೊಲೆ ಎಂಬುದು ಗೊತ್ತಿದೆ. ಸಚಿವ ಈಶ್ವರಪ್ಪ ವಿರುದ್ಧ ಮಾಡಿದ್ದ ಆರೋಪಕ್ಕೆ ಸಂತೋಷ್ ಪಾಟೀಲ್ ಬಲಿಯಾಗಿದ್ದಾರೆ. ಹೀಗಾಗಿ ಈಶ್ವರಪ್ಪ ವಿರುದ್ಧ ಐಪಿಸಿ ಸೆಕ್ಷನ್ 302ರಡಿಯಲ್ಲಿ ಕೇಸು ದಾಖಲಿಸಿ ಬಂಧಿಸಬೇಕು ಎಂದು ಡಿ ಕೆ ಶಿವಕುಮಾರ್ ಆಗ್ರಹಿಸಿದ್ದಾರೆ.

ಕೆ.ಎಸ್.ಈಶ್ವರಪ್ಪ ವಿರುದ್ಧ ಭ್ರಷ್ಟಾಚಾರ ಆರೋಪ ಹೊರಿಸಿದ ಬಿಜೆಪಿ ಕಾರ್ಯಕರ್ತ ಸಂತೋಷ್ ಪಾಟೀಲ್ ಅವರನ್ನೂ ಬಿಟ್ಟಿಲ್ಲ, ಆತ್ಮಹತ್ಯೆ ಪತ್ರದಲ್ಲಿ ಸಚಿವರ ಹೆಸರಿದೆ ಎಂದು ಹೇಳಿದ್ದಾರೆ. ಈಶ್ವರಪ್ಪನವರನ್ನು ತಡಮಾಡದೆ ಬಂಧಿಸಬೇಕು,ಇಲ್ಲವಾದಲ್ಲಿ ಸಿಎಂ ಮನೆಗೆ ಘೇರಾವ್ ಹಾಕಬೇಕಾಗುತ್ತದೆ ಎಂದು ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲಾ ಹೇಳಿದ್ದಾರೆ.

ಕೆಎಸ್ ಈಶ್ವರಪ್ಪ ಸಂತೋಷ್ ಪಾಟೀಲ್ ಸಾವಿಗೆ ಸಂಪೂರ್ಣ ಹೊಣೆಗಾರರಾಗಿದ್ದು, ಅವರನ್ನು ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಿ ಕೇಸು ದಾಖಲಿಸಬೇಕು ಎಂದು ಸಿದ್ದರಾಮಯ್ಯ ಕೂಡ ಆಗ್ರಹಿಸಿದ್ದಾರೆ.