ಹಾಸನ: ಕಾಂಗ್ರೆಸ್ ಯಾರ ಸಾವನ್ನೂ ಬಯಸುವುದಿಲ್ಲ. ಜನರ ಹೊಟ್ಟೆ ತುಂಬಿಸುವ ಬಗ್ಗೆ ಮಾತ್ರ ಯೋಚಿಸುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಿಳಿಸಿದರು.
ಹಾಸನ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮೋದಿ ಸಾಯಲಿ ಎಂದು ಕಾಂಗ್ರೆಸ್ ಬಯಸುತ್ತಿದೆ ಎಂಬ ಪ್ರಧಾನಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿರುವ ಅವರು, ಮಾನವೀಯತೆ ಹಾಗೂ ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದ ನಾಯಕರನ್ನು ಒಳಗೊಂಡ ಪಕ್ಷ ಯಾವುದಾದರೂ ಇದ್ದರೆ ಅದು ಕಾಂಗ್ರೆಸ್ ಮಾತ್ರ. ನಾವು ಯಾರ ಸಾವನ್ನೂ ಬಯಸುವುದಿಲ್ಲ. ಜನರ ಹೊಟ್ಟೆ ತುಂಬಿಸುವ ಬಗ್ಗೆ ಯೋಚನೆ ಮಾಡುತ್ತೇವೆ ಎಂದರು.
ಪ್ರಧಾನಿ ನರೇಂದ್ರ ಮೋದಿ ಅವರು ಮಲ್ಲಿಕಾರ್ಜುನ ಖರ್ಗೆ ಅವರನ್ನು ರಬ್ಬರ್ ಸ್ಟಾಂಪ್ ಅಧ್ಯಕ್ಷರು ಎನ್ನುವ ರೀತಿಯಲ್ಲಿ ಬಿಂಬಿಸಿ, ಅವಹೇಳನ ಮಾಡಿದ್ದಾರೆ. ಪ್ರಧಾನಮಂತ್ರಿ ಸ್ಥಾನಕ್ಕೆ ನಾವು ಗೌರವ ನೀಡುತ್ತೇವೆ. ಮಹಾತ್ಮ ಗಾಂಧಿ, ಇಂದಿರಾ ಗಾಂಧಿ, ಬಾಬು ಜಗಜೀವನ್ ರಾಮ್, ರಾಜೀವ್ ಗಾಂಧಿ ಅವರು ಕೂತ ಜಾಗದಲ್ಲಿ ಖರ್ಗೆ ಅವರು ಕೂತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.
ಖರ್ಗೆ ಅವರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಬೆಳೆದು ನಿಂತಿದ್ದಾರೆ. ಒಬ್ಬ ದಲಿತ ನಾಯಕ ಗುಲ್ಬರ್ಗ ಪಟ್ಟಣ ಪಾಲಿಕೆ ಸದಸ್ಯ ಸ್ಥಾನದಿಂದ ಹಿಡಿದು 50 ವರ್ಷಗಳ ಕಾಲ ನಿರಂತರವಾಗಿ ಸಂಸದೀಯ ಜವಾಬ್ದಾರಿಯನ್ನು ನಿಭಾಯಿಸಿ ಸ್ವಂತ ಸಾಮರ್ಥ್ಯದ ಮೇಲೆ ಬೆಳೆದಿದ್ದಾರೆ. ಕಾಂಗ್ರೆಸ್ ಪಕ್ಷದ ಪ್ರಜಾಪ್ರಭುತ್ವ ವ್ಯವಸ್ಥೆಯ ಚುನಾವಣೆಯಲ್ಲಿ ಗೆದ್ದು ಅಧ್ಯಕ್ಷರಾಗಿ ಆಯ್ಕೆಯಾಗಿರುವವರ ವಿರುದ್ಧ ಈ ರೀತಿ ಮಾತನಾಡುವುದು ಸರಿಯಲ್ಲ. ಇದು ಪ್ರಜಾಪ್ರಭುತ್ವ ವ್ಯವಸ್ಥೆಗೆ ಅಗೌರವ ತರುವ ನಡೆ ಎಂದು ಖಂಡಿಸಿದರು.
ಎಲ್ಲ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ. ಇಂದು ಕೂಡ ಅಡುಗೆ ಅನಿಲ ಸಿಲಿಂಡರ್ ಬೆಲೆ 50 ರೂ. ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರು 7ನೇ ವೇತನ ಆಯೋಗದ ವರದಿ ಜಾರಿಗೆ ಅರ್ಹರಾಗಿದ್ದಾರೆ. ಆದರೆ ಸರ್ಕಾರ ಅವರು ನುಡಿದಂತೆ ನಡೆಯಲಿಲ್ಲ. ಈ ಹಿಂದೆ ಅವರು ತಮ್ಮ ಪ್ರಣಾಳಿಕೆಯಲ್ಲಿ 600 ಭರವೆಸೆ ನೀಡಿದ್ದು 550 ಅನ್ನು ಈಡೇರಿಸಲು ವಿಫಲರಾಗಿದ್ದಾರೆ. ಈ ವಿಚಾರವಾಗಿ ನಾವು ಪ್ರಶ್ನೆ ಕೇಳುತ್ತಿದ್ದರೂ ಉತ್ತರ ನೀಡಲಾಗುತ್ತಿಲ್ಲ ಎಂದು ಕಿಡಿಕಾರಿದರು.
ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಸ್ವಂತ ಶಕ್ತಿ ಮೇಲೆ ಅಧಿಕಾರಕ್ಕೆ ಬರುವುದು ಖಚಿತ. ಅದರಲ್ಲಿ ಯಾವುದೇ ಅನುಮಾನ ಬೇಡ. ನಾವು ಅಧಿಕಾರಕ್ಕೆ ಬಂದ ನಂತರ ಈ 7ನೇ ವೇತನ ಆಯೋಗದ ವರದಿಯನ್ನು ಜಾರಿಗೊಳಿಸುತ್ತೇವೆ. ನಾವು ಸರ್ಕಾರಿ ನೌಕರರ ನೋವು, ಸಮಸ್ಯೆಗಳಿಗೆ ಸ್ಪಂದಿಸುತ್ತೇವೆ. ಅವರು ತಮ್ಮ ಹಕ್ಕನ್ನು ಕೇಳುತ್ತಿದ್ದು, ಅದನ್ನು ನೀಡಲು ಕಾಂಗ್ರೆಸ್ ಬದ್ಧವಾಗಿದೆ ಎಂದು ಭರವಸೆ ನೀಡಿದರು.
ಟಿಕೆಟ್ ಹಂಚಿಕೆ ವಿಚಾರವಾಗಿ ಮಾತನಾಡಿದ ಡಿ.ಕೆ.ಶಿವಕುಮಾರ್, ಈ ತಿಂಗಳು 7-8 ರಂದು ನಮ್ಮ ಪಕ್ಷದ ಸ್ಕ್ರೀನಿಂಗ್ ಕಮಿಟಿ ಸಭೆ ನಡೆಯಲಿದೆ. ಸುಮಾರು 150 ಕ್ಷೇತ್ರಗಳಲ್ಲಿನ ಟಿಕೆಟ್ ಪಟ್ಟಿ ಸಿದ್ಧ ಮಾಡಿದ್ದು, ನಂತರ ನಾವು ಅಂತಿಮ ಪಟ್ಟಿ ಪ್ರಕಟಿಸುತ್ತೇವೆ ಎಂದರು.