ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಮುಕ್ತಾಯಗೊಂಡಿದ್ದು, ಸಿಎಂ ಆಯ್ಕೆ ವಿಚಾರದಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ.
ನಗರದ ಶಾಂಗ್ರೀಲಾ ಹೊಟೇಲ್ ನಲ್ಲಿ ನಡೆದ ಸಭೆಯಲ್ಲಿ ಭಾಗಿಯಾದ ಶಾಸಕರಿಗೆ ಸಿಎಂ ಆಯ್ಕೆ ವಿಚಾರದಲ್ಲಿ ಒಮ್ಮತಕ್ಕೆ ಬರಲು ಸಾಧ್ಯವಾಗಿಲ್ಲ. ಸಿಎಂ ಆಯ್ಕೆ ವಿಚಾರದಲ್ಲಿ ಹೈಕಮಾಂಡ್ ನಿರ್ಧಾರವೇ ಅಂತಿಮವಾಗಿರಲಿದೆ ಎಂಬ ಒಂದು ಸಾಲಿನ ನಿರ್ಣಯವನ್ನು ಕೈಗೊಳ್ಳಲಾಗಿದೆ.
ಹೈಕಮಾಂಡ್ ಗೆ ವೀಕ್ಷಕರು ಇಂದಿನ ಶಾಸಕಾಂಗ ಸಭೆಯ ವರದಿ ನೀಡಲಿದ್ದು, ಈ ವರದಿ ಆಧರಿಸಿ ಕಾಂಗ್ರೆಸ್ ಹೈ ಕಮಾಂಡ್ ಇನ್ನು ಒಂದು ಅಥವಾ ಎರಡು ದಿನಗಳಲ್ಲಿ ಕರ್ನಾಟಕಕ್ಕೆ ನೂತನ ಸಿಎಂ ಆಯ್ಕೆ ಮಾಡಲಿದೆ. ಈಗಾಗಲೇ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ದೆಹಲಿ ತಲುಪಿದ್ದು, ನಾಳೆ ಸೋನಿಯಾ ಗಾಂಧಿ ಅವರೊಂದಿಗೆ ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳುವ ಸಾಧ್ಯತೆ ಇದೆ.
ಈ ಮಧ್ಯೆ ಶಾಸಕಾಂಗ ಸಭೆ ಬಳಿಕ, ಸಿಎಂ ಆಯ್ಕೆ ಸಂಬಂಧ ಪ್ರತಿಯೊಬ್ಬ ಶಾಸಕರ ಅಭಿಪ್ರಾಯವನ್ನೂ ಸಂಗ್ರಹಿಸಲು ವೀಕ್ಷಕರು ಮುಂದಾಗಿದ್ದಾರೆ.