ಹುಬ್ಬಳ್ಳಿ: ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆ ಸುಳ್ಳಿನ ಕಂತೆಯಾಗಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಲೇವಡಿ ಮಾಡಿದ್ದಾರೆ.
ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯನ್ನು ನೋಡಿದರೆ ಇವರು 40 ವರ್ಷ ಅಧಿಕಾರ ಮಾಡಿದ್ದಾರೆ. ಆದರೆ ಈವರೆಗೆ ಯಾವುದೇ ಅಭಿವೃದ್ಧಿ ಆಗಿಲ್ಲ ಎನ್ನುವುದು ಅರಿವಾಗುತ್ತದೆ. ದುರಾಡಳಿತ ಮಾಡಿ ಚುನಾವಣೆ ಹತ್ತಿರ ಬಂದಾಗ ಜನರ ಮೂಗಿಗೆ ತುಪ್ಪ ಹಚ್ಚುವ ಕೆಲಸವನ್ನು ಕಾಂಗ್ರೆಸ್ ಮಾಡುತ್ತಿದೆ. ರೈತರು, ದಲಿತರ ಹೆಸರಿನಲ್ಲಿ ಪುಂಖಾನುಪುಂಖವಾಗಿ ಸುಳ್ಳು ಹೇಳುತ್ತಿದೆ ಎಂದು ಹರಿಹಾಯ್ದರು.
ಈ ಹಿಂದೆ ಉತ್ತರಾಖಂಡದಲ್ಲಿ ಸಹ ಇದೇ ತರಹ ಕಾಂಗ್ರೆಸ್ ಸುಳ್ಳು ಭರವಸೆ ನೀಡಿತ್ತು. ಅದರೆ ಅಲ್ಲಿನ ಜನರು ಸೊಪ್ಪು ಹಾಕದೇ ಬಿಜೆಪಿಯನ್ನು ಸ್ಪಷ್ಟ ಬಹುಮತದಿಂದ ಆಯ್ಕೆ ಮಾಡಿದ್ದಾರೆ. ಅದೇ ಮಾದರಿಯಲ್ಲಿ ರಾಜ್ಯದಲ್ಲಿ ಕೂಡಾ ಜನರು ಕಾಂಗ್ರೆಸ್‌ನ ಸುಳ್ಳು ಭರವಸೆಯನ್ನು ನಂಬಲ್ಲ ಎಂದು ಲೇವಡಿ ಮಾಡಿದರು.
ಮುಸ್ಲಿಂ ಮೀಸಲಾತಿ ಜಾರಿ ಮಾಡೋದು ಹಿಂದೂಗಳಿಗೆ ಅಪಮಾನ ಮಾಡಿದಂತೆ. ಇದೀಗ ಕಾಂಗ್ರೆಸ್ ಬಜರಂಗದಳವನ್ನು ನಿಷೇಧ ಮಾಡುತ್ತೇವೆ ಎಂದು ಹೇಳಿದೆ. ಈ ಹಿಂದೆ ನಾವು ಪಿಎಫ್ಐ ಅನ್ನು ಬ್ಯಾನ್ ಮಾಡಿದಕ್ಕಾಗಿ ಇದೀಗ ಕಾಂಗ್ರೆಸ್ ತುಷ್ಟೀಕರಣ ರಾಜಕಾರಣದ ಭಾಗವಾಗಿ ಆರ್.ಎಸ್.ಎಸ್, ಬಜರಂಗದಳವನ್ನು ನಿಷೇಧ ಮಾಡುವುದಾಗಿ ಘೋಷಣೆ ಮಾಡಿದೆ. ದೇಶವನ್ನು ಏನು ಮಾಡಲು ಹೊರಟಿದ್ದೀರಿ ಎಂದು ನಾನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ರಾಹುಲ್ ಗಾಂಧಿ ಅವರನ್ನು ಕೇಳಲು ಇಚ್ಛೆ ಪಡುತ್ತೇನೆ ಎಂದರು.
ಸದ್ಯ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪ್ರಣಾಳಿಕೆ ಮುಸ್ಲಿಂ ಲೀಗ್ ಮ್ಯಾನಿಫೆಸ್ಟೋ ಇರಬಹುದು ಎಂಬ ಅನುಮಾನ ಮೂಡುತ್ತಿದೆ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಈ ಹಿಂದೆ ಲೋಕಾಯುಕ್ತವನ್ನು ನಿಶಕ್ತಿ ಮಾಡಿದ್ದ ಕಾಂಗ್ರೆಸ್ ಇದೀಗ ಲೋಕಾಯುಕ್ತವನ್ನು ಬಲಿಷ್ಠಗೊಳಿಸಲು ತಿಳಿಸಿದೆ. ಕಾಂಗ್ರೆಸ್ ಪಕ್ಷದ ನಾಯಕರೇ ಭ್ರಷ್ಟಾಚಾರ ಪ್ರಕರಣದಲ್ಲಿ ಬೇಲ್ ಮೇಲೆ ಹೊರಗಡೆ ಇದ್ದಾರೆ. ಕಾಂಗ್ರೆಸ್ ಮತ್ತು ಸುಳ್ಳು ಒಂದೇ ನಾಣ್ಯದ ಎರಡು ಮುಖಗಳು ಅವರು ಅಧಿಕಾರಕ್ಕೆ ಬರುವುದು ತಿರುಕನ ಕನಸು ಎಂದು ಹೇಳಿದರು.