ಬೆಂಗಳೂರು: ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಿದ್ದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಶುಕ್ರವಾರ ನಗರದ ಹೊರವಲಯದ ವರ್ತೂರು ರೆಸಾರ್ಟ್ ನಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆ ನಡೆಯುತ್ತಿದೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಟಿಕೆಟ್’ಗಾಗಿ ಅರ್ಜಿ ಸಲ್ಲಿಸಿದ್ದ ಗದಗ ಶಾಸಕರಾಗಿದ್ದ ಶ್ರೀಶೈಲಪ್ಪ ಬಿದರೂರು ಅವರು ಕೂಡಾ ಭಾಗಿಯಾಗಿದ್ದರು.
ಈ ಸಂದರ್ಭದಲ್ಲಿ ಸಭೆಗೆ ಭಾಗಿಯಾಗಲು ಆಗಮಿಸಿದ್ದ ಶ್ರೀಶೈಲಪ್ಪ ಬಿದರೂರು ಅವರಿಗೆ ಹೃದಯಾಘಾತವಾಗಿದೆ. ಕೂಡಲೇ ಅವರನ್ನು ಪಕ್ಷದ ಕಾರ್ಯಕರ್ತರು ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿ ಆಗದೆ ಅವರು ಮೃತಪಟ್ಟಿದ್ದಾರೆ.
ಕಾಂಗ್ರೆಸ್ ಸಭೆ ಮುಂದೂಡಿಕೆ
ಶ್ರೀಶೈಲಪ್ಪ ಬಿದರೂರು ನಿಧನದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ. ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಶ್ರೀಶೈಲಪ್ಪ ಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.














