ಬೆಂಗಳೂರು: ಕೇಂದ್ರದಲ್ಲಿ ಸರ್ಕಾರ ರಚಿಸುವ ಕಾಂಗ್ರೆಸ್‌ನ ಪ್ರಯತ್ನ ನಡೆಯುವುದಿಲ್ಲ ಎಂದು ಜೆಡಿಎಸ್ ಮುಖಂಡ ಎಚ್‌ಡಿ ಕುಮಾರಸ್ವಾಮಿ ಬುಧವಾರ ಹೇಳಿದ್ದಾರೆ.
ಭಾರತೀಯ ಚುನಾವಣಾ ಆಯೋಗ ಮಂಗಳವಾರ 543 ಲೋಕಸಭಾ ಕ್ಷೇತ್ರಗಳ ಪೈಕಿ 542 ಕ್ಷೇತ್ರಗಳಿಗೆ ಫಲಿತಾಂಶ ಪ್ರಕಟಿಸಿದ್ದು, ಬಿಜೆಪಿ 240 ಮತ್ತು ಕಾಂಗ್ರೆಸ್ 99 ಸ್ಥಾನಗಳನ್ನು ಗೆದ್ದಿದೆ.
ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಷ್ಟ್ರ ರಾಜಧಾನಿಯಲ್ಲಿ ಎನ್‌ಡಿಎ ಘಟಕಗಳ ಸಭೆ ನಡೆಯಲಿದ್ದು, ಜೆಡಿಎಸ್ ಪರವಾಗಿ ತಾವು ಭಾಗವಹಿಸುವುದಾಗಿ ಹೇಳಿದರು.
ಸರ್ಕಾರ ರಚನೆಗೆ ಕಾಂಗ್ರೆಸ್ ಪಕ್ಷದ ಕಸರತ್ತು ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಕುಮಾರಸ್ವಾಮಿ, ಅವರ ಪ್ರಯತ್ನಗಳಿಂದ ಏನೂ ಆಗುವುದಿಲ್ಲ ಎಂದರು.
ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರು ಮಂಡ್ಯದಿಂದ ಎನ್‌ಡಿಎ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ. ಇವರೊಂದಿಗೆ ಕೋಲಾರದಿಂದ ಪಕ್ಷದ ಅಭ್ಯರ್ಥಿ ಮಲ್ಲೇಶ್ ಬಾಬು ಸಹ ಗೆಲುವು ಸಾಧಿಸಿದ್ದಾರೆ. ಆದರೆ, ಹಾಸನದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪ್ರಜ್ವಲ್ ರೇವಣ್ಣ ಸೋತಿದ್ದಾರೆ.
ಕರ್ನಾಟಕದ 28 ಲೋಕಸಭಾ ಸ್ಥಾನಗಳಲ್ಲಿ ಎನ್‌ಡಿಎ 19 ಸ್ಥಾನಗಳನ್ನು ಪಡೆದುಕೊಂಡಿದೆ. ಬಿಜೆಪಿ 17 ಮತ್ತು ಜೆಡಿಎಸ್ 2ರಲ್ಲಿ ಗೆದ್ದಿದೆ. 2019 ರಲ್ಲಿ ಪಕ್ಷ ಬೆಂಬಲಿತ ಸ್ವತಂತ್ರ ಅಭ್ಯರ್ಥಿಯೊಂದಿಗೆ ಬಿಜೆಪಿ 25 ಸ್ಥಾನಗಳನ್ನು ಗೆದ್ದಿತ್ತು. ಆಡಳಿತಾರೂಢ ಕಾಂಗ್ರೆಸ್ 2019 ರಲ್ಲಿ ಒಂದು ಸ್ಥಾನದಿಂದ ಈ ಬಾರಿ ಒಂಬತ್ತಕ್ಕೆ ತನ್ನ ಸಂಖ್ಯೆಯನ್ನು ಹೆಚ್ಚಿಸಿಕೊಂಡಿದೆ.