ಚೆನ್ನೈ(Chennai)-ದೇಶದಲ್ಲಿ ಮತ್ತೆ ಕೋವಿಡ್ (Covid) ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದೆಹಲಿ, ಹರಿಯಾಣ ಮತ್ತು ಉತ್ತರ ಪ್ರದೇಶ ನಂತರ ಇದೀಗ ತಮಿಳುನಾಡು ಸರ್ಕಾರವು ರಾಜ್ಯದಲ್ಲಿ ಮಾಸ್ಕ್ (Mask) ಧರಿಸುವಿಕೆಯನ್ನು ಕಡ್ಡಾಯಗೊಳಿಸಿದೆ.
ಈ ಸಂಬಂಧ ತಮಿಳುನಾಡು ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ನಿಯಮ ಉಲ್ಲಂಘಿಸಿದರೆ 500 ರೂ. ದಂಡವನ್ನು ಪಾವತಿಸಬೇಕಾಗುತ್ತದೆ ಎಂದು ಹೇಳಿದೆ.
ದೇಶದಲ್ಲಿ, ವಿಶೇಷವಾಗಿ ರಾಷ್ಟ್ರ ರಾಜಧಾನಿಯಲ್ಲಿ ಹೆಚ್ಚುತ್ತಿರುವ ಕೋವಿಡ್ -19 ಪ್ರಕರಣಗಳನ್ನು ಪರಿಗಣಿಸಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ತಮಿಳುನಾಡು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಜೆ.ರಾಧಾಕೃಷ್ಣನ್ ಅವರು ಹೇಳಿದ್ದಾರೆ.
ತಮಿಳುನಾಡಿನಲ್ಲಿ ಕೂಡ ಕಳೆದೆರಡು ದಿನಗಳಿಂದ ಹೊಸ ಪ್ರಕರಣಗಳ ಸಂಖ್ಯೆಯಲ್ಲಿ ಸ್ವಲ್ಪ ಹೆಚ್ಚಳವಾಗಿದೆ. ತಮಿಳುನಾಡಿನಲ್ಲಿ ಗುರುವಾರ 39 ಜನರಿಗೆ ಕೊರೋನಾ ವೈರಸ್ ಪಾಸಿಟಿವ್ ದೃಢಪಟ್ಟಿದ್ದರೆ, ಹಿಂದಿನ ದಿನ 31 ಹೊಸ ಪಾಸಿಟಿವ್ ಪ್ರಕರಣಗಳು ದಾಖಲಾಗಿದ್ದವು.
ಕೋವಿಡ್ ಸೋಂಕುಗಳ ಸಂಖ್ಯೆಯಲ್ಲಿ ಇಳಿಮುಖವಾದ ನಂತರ ಆರೋಗ್ಯ ಇಲಾಖೆಯು ಈ ಹಿಂದೆ ಹೊರಡಿಸಿದ್ದ ಮಾಸ್ಕ್ ಕಡ್ಡಾಯ ಆದೇಶವನ್ನು ಹಿಂಪಡೆದಿತ್ತು.