ನವದೆಹಲಿ: ತಮಿಳುನಾಡಿಗೆ ಮತ್ತೆ 2,600 ಕ್ಯೂಸೆಕ್ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಸೋಮವಾರ ಸೂಚನೆ ನೀಡಿದೆ.
ಮುಂದಿನ 15 ದಿನಗಳ ಕಾಲ 2,600 ಕ್ಯೂಸೆಕ್ ನೀರು ಹರಿಸುವಂತೆ ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿಯ ಸಭೆಯಲ್ಲಿ ಸೂಚನೆ ನೀಡಲಾಗಿದೆ. ಕರ್ನಾಟಕದ ಪರ ಎಸಿಎಸ್ ರಾಕೇಶ್ ಸಿಂಗ್ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಭಾಗವಹಿಸಿ ವಾದ ಮಂಡಿಸಿದ್ದಾರೆ.
ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಕರ್ನಾಟಕಕ್ಕೆ ಈ ಹಿಂದೆ ಸೂಚಿಸಿತ್ತು. ಅಕ್ಟೋಬರ್ ಅಂತ್ಯದ ವರೆಗೆ ಈ ಆದೇಶವನ್ನು ಪಾಲನೆ ಮಾಡುವಂತೆ ಸೂಚನೆ ನೀಡಿತ್ತು. ಅದರಂತೆ, ಕರ್ನಾಟಕ ಸದ್ಯ ರಾಜ್ಯದ ಜನರ, ರೈತರ ವಿರೋಧದ ಮಧ್ಯೆಯೂ ತಮಿಳುನಾಡಿಗೆ ನೀರು ಹರಿಸುತ್ತಿದೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವ ವಿಚಾರವಾಗಿ ಕರ್ನಾಟಕದಲ್ಲಿ ಭಾರೀ ಪ್ರತಿಭಟನೆಗಳು ನಡೆದಿದ್ದವು. ಈಗಲೂ ಕಾವೇರಿ ಜಲಾನಯನ ಪ್ರದೇಶಗಳಾದ ಮೈಸೂರು, ಮಂಡ್ಯ ಮತ್ತಿತರ ಕಡೆಗಳಲ್ಲಿ ರೈತರು ಹಾಗೂ ವಿವಿಧ ಸಂಘಟನೆಗಳು ಪ್ರತಿಭಟನೆ, ಧರಣಿ ನಡೆಸುತ್ತಿವೆ.