ಬೆಂಗಳೂರು (Bengaluru): ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾಗಿದ್ದ ವಿಧಾನಪರಿಷತ್ ಸದಸ್ಯತ್ವ ಸ್ಥಾನಕ್ಕೆ ಉಪಚುನಾವಣೆ ದಿನಾಂಕ ನಿಗದಿಯಾಗಿದೆ.
ಸಿ.ಎಂ ಇಬ್ರಾಹಿಂ ರಾಜೀನಾಮೆಯಿಂದ ತೆರವಾದ ವಿಧಾನಪರಿಷತ್ ಸ್ಥಾನಕ್ಕೆ ಉಪ ಚುನಾವಣೆ ನಡೆಸಲು ಕೇಂದ್ರ ಚುನಾವಣಾ ಆಯೋಗ ಅಧಿಸೂಚನೆ ಹೊರಡಿಸಿದೆ.
ಅಗಸ್ಟ್ 11 ರಂದು ವಿಧಾನಪರಿಷತ್ ನ ಒಂದು ಸ್ಥಾನಕ್ಕೆ ಚುನಾವಣೆ ನಡೆಯಲಿದೆ. ಜುಲೈ 25ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಆಗಸ್ಟ್ 1 ರಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಆಗಸ್ಟ್ 4ರೊಳಗೆ ಅಭ್ಯರ್ಥಿಗಳು ನಾಮಪತ್ರ ಹಿಂಪಡೆಯಬಹುದಾಗಿದೆ. ಆಗಸ್ಟ್ 11 ರಂದು ಬೆಳಿಗ್ಗೆ 9 ರಿಂದ ಸಾಯಂಕಾಲ 4ರವರೆಗೆ ಮತದಾನ ನಡೆಯಲಿದ್ದು, ಅಂದೇ ಸಂಜೆ ಮತ ಎಣಿಕೆ ನಡೆದು ಫಲಿತಾಂಶ ಹೊರಬೀಳಲಿದೆ.
ಸಿಎಂ ಇಬ್ರಾಹಿಂ ಇತ್ತೀಚೆಗೆ ತಮ್ಮ ಪರಿಷತ್ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿ ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಸೇರ್ಪಡೆಗೊಂಡಿದ್ದರು.