ದಾವಣಗೆರೆ: ಚನ್ನಗಿರಿ ತಾಲೂಕಿನ ಮರಬನಹಳ್ಳಿ ಬಳಿ ಇಂದು ಬೆಳಗ್ಗೆ ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ನ ಎಕ್ಸಲ್ ಕಟ್ ಆಗಿ ಪಲ್ಟಿಯಾಗಿರುವ ಘಟನೆ ನಡೆದಿದೆ ಎನ್ನಲಾಗಿದೆ. ಘಟನೆಯಲ್ಲಿ ಓರ್ವ ವಿದ್ಯಾರ್ಥಿ ಸಾವನ್ನಪ್ಪಿದ್ದು, ಮತ್ತೋರ್ವನ ಸ್ಥಿತಿ ಗಂಭೀರವಾಗಿದೆ. ಇನ್ನೂ 50 ಜನರು ಗಾಯಗೊಂಡಿದ್ದಾರೆ. ದರ್ಶನ್ ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಗಾಯಾಳುಗಳನ್ನು ದಾವಣಗೆರೆ ಜಿಲ್ಲಾಸ್ಪತ್ರೆ ಹಾಗೂ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ರವಾನಿಸಲಾಗಿದೆ ಎಂದು ಮಾಹಿತಿ ತಿಳಿದುಬಂದಿದೆ ಎನ್ನಲಾಗುತ್ತಿದೆ.
ಇಂದು ಮೇ 8 (ಶುಕ್ರವಾರ) ದಂದು ಬೆಳಿಗ್ಗೆ 9:30ರ ಸುಮಾರಿಗೆ ದಾವಣಗೆರೆಯಿಂದ ಬಸವಾಪಟ್ಟಣಕ್ಕೆ ಹೋಗುತ್ತಿದ್ದಾಗ ಇದ್ದಕ್ಕಿದ್ದಂತೆ ಬಸ್ಸಿನ ಎಕ್ಸಲ್ ಕಟ್ ಆಗಿ ಪಲ್ಟಿಯಾಗಿದೆ. ತಕ್ಷಣವೇ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸಿ, ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಬಸವಾಪಟ್ಟಣ ಪೊಲೀಸ್ ಠಾಣೆಯ ಪಿಎಸ್ಐ ಇಮ್ತಿಯಾಜ್ ಮತ್ತು ಸಿಬ್ಬಂದಿ ಘಟನಾ ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದರು. ಆದರೆ “ಬೆಳಿಗ್ಗೆ 9:30ರ ಸುಮಾರಿಗೆ ಎಕ್ಸಲ್ ಕಟ್ ಆಗಿ ಅವಘಡ ನಡೆದಿದೆ. ದರ್ಶನ್ ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದಾನೆ. ಮತ್ತೋರ್ವನ ಪರಿಸ್ಥಿತಿ ಗಂಭೀರವಾಗಿದೆ. ಎಲ್ಲಾ ಗಾಯಳುಗಳನ್ನು ಹತ್ತಿರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಕೆಲವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ” ಎಂದು ಪಿಎಸ್ಐ ಇಮ್ತಿಯಾಜ್ ಮಾಹಿತಿ ನೀಡಿದರು ಎಂದು ತಿಳಿದುಬಂದಿದೆ.
















