ಬೆಂಗಳೂರು: ಅಪೂರ್ಣಗೊಂಡಿರುವ ಕೊಡಗು ಜಿಲ್ಲೆ ವಿರಾಜಪೇಟೆ ತಾಲ್ಲೂಕು ಭಾಗಮಂಡಲ ಮೇಲ್ಸೇತುವೆ ಕಾಮಗಾರಿ ಯನ್ನ ಜನವರಿ ತಿಂಗಳಾಂತ್ಯಕ್ಕೆ ಮುಗಿಸುವಂತೆ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳಿಗೆ ಗಡುವು ನಿಗದಿಗೊಳಿಸಲಾಗಿದೆ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್ ಎಸ್ ಬೋಸರಾಜು ಅವರು ತಿಳಿಸಿದ್ದಾರೆ.
ಸಚಿವರ ಅಧ್ಯಕ್ಷತೆಯಲ್ಲಿ ಇಂದು ವಿಕಾಸಸೌಧದಲ್ಲಿ ನಡೆದ ಸಭೆಯಲ್ಲಿ ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು ಹಾಗೂ ಕಾವೇರಿ ಜಲ ನಿಗಮ ನಿಯಮಿತದ ಅಧಿಕಾರಿಗಳು ಭಾಗವಹಿಸಿದ್ದರು.
ಹಲವಾರು ವರ್ಷಗಳಿಂದ ಈ ಸೇತುವೆಯ ಕಾಮಗಾರಿ ನಡೆಯುತ್ತಿದೆ. ಆದರೆ, ಇದುವರೆಗೂ ಇದನ್ನ ಪೂರ್ಣಗೊಳಿಸಲಾಗಿಲ್ಲ. ಸಾರ್ವಜನಿಕರ ಅನುಕೂಲಕ್ಕಾಗಿ ಇದನ್ನ ಶೀಘ್ರವಾಗಿ ಸಿದ್ದಗೊಳಿಸುವ ಅವಶ್ಯಕತೆಯಿದೆ. ಅಂತಿಮ ಹಂತದ ಕಾಮಗಾರಿಯನ್ನ ಮುಗಿಸುವ ಅವಶ್ಯಕತೆಯಿದ್ದು, ತಿಂಗಳಾಂತ್ಯದ ಒಳಗೆ ಕಾಮಗಾರಿ ಮುಗಿಸವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಸಚಿವರು ತಿಳಿಸಿದರು.
ಜಲ ಸಂಪನ್ಮೂಲ ಇಲಾಖೆ ಮತ್ತು ನಗರಾಭಿವೃದ್ದಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳಾದ ರಾಕೇಶ್ ಸಿಂಗ್ ಅವರು ಮಾತನಾಡಿ, ಅಧಿಕಾರಿಗಳು ಕಾಮಗಾರಿಯನ್ನ ಮುಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕು. ಪ್ರತಿ ದಿನ ಕಾಮಗಾರಿ ಪ್ರಗತಿಯ ವರದಿಯನ್ನು ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.