ಕೋಲಾರ (Kolar): ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಎಲ್ಲಾ ಸದಸ್ಯರಿಗೆ ನಾಳೆ ವಕೀಲರ ಮೂಲಕ ಮಾನನಷ್ಟ ಮೊಕದ್ದಮೆ ನೋಟಿಸ್ ಕಳುಹಿಸುವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಮುನಿರತ್ನ ಹೇಳಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುತ್ತಿಗೆದಾರರ ಕಚೇರಿಗಳಿಗೂ ಬೆಳಿಗ್ಗೆ 11ಗಂಟೆಗೆ ನೋಟಿಸ್ ಕಳುಹಿಸುತ್ತೇನೆ. ಪತ್ರ ತಲುಪಿದ ಏಳು ದಿನಗಳಲ್ಲಿ ಮಾಧ್ಯಮಗಳ ಮೂಲಕ ಕ್ಷಮೆ ಕೋರಬೇಕು. ಇಲ್ಲವೇ ಆರೋಪಕ್ಕೆ ತಕ್ಕಂತೆ ಪೂರಕ ದಾಖಲೆ ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಎಚ್ಚರಿಕೆ ನೀಡಿದ್ದಾರೆ.
ಪ್ರಧಾನಿಗೆ ದಾಖಲೆ ನೀಡಲಿ. ಲೋಕಾಯುಕ್ತ ಅಥವಾ ರಾಜ್ಯಪಾಲರಿಗೆ ದಾಖಲೆ ನೀಡಲಿ. ನಾನು ಮಾನನಷ್ಟ ಮೊಕದ್ದಮೆ ಹೂಡುತ್ತಿರುವುದರಿಂದ ನ್ಯಾಯಾಲಯಕ್ಕೆ ದಾಖಲೆ ಒಪ್ಪಿಸಲಿ. 50 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡುವುದಾಗಿ ಈಗಾಗಲೇ ತಿಳಿಸಿದ್ದೇನೆ ಎಂದು ಹೇಳಿದರು.
ಕೋಲಾರ ಜಿಲ್ಲೆಯಲ್ಲಿ ನಡೆದಿರುವ ಎಲ್ಲಾ ಕಾಮಗಾರಿಗಳ ಗುಣಮಟ್ಟ ಪರಿಶೀಲನೆ ನಡೆಯಲಿದೆ. ತನಿಖೆ ನಡೆಸಲು ಈಗಾಗಲೇ ಮುಖ್ಯಮಂತ್ರಿಗೆ ಮನವಿ ಮಾಡಿದ್ದು, ಈ ವಾರ ಆದೇಶ ಹೊರಬೀಳಲಿದೆ. ಯಾವ ಯಾವ ಇಲಾಖೆಯಲ್ಲಿ ಕಾಮಗಾರಿ ನಡೆದಿದೆ ಅಲ್ಲಿ ಮೇಲಾಧಿಕಾರಿಗಳಿಂದ ತಪಾಸಣೆ ಕಾರ್ಯ ನಡೆಸಲಾಗುವುದು. ತಪ್ಪಿತಸ್ಥರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಕಳಪೆ ರಸ್ತೆ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಡಿಸಿಸಿ ಬ್ಯಾಂಕ್ ಅವ್ಯವಹಾರದ ಬಗ್ಗೆಯೂ ತನಿಖೆ ನಡೆಯಲಿದೆ ಎಂದರು.
ಆ.19ರಂದು ಕೋಲಾರದಲ್ಲಿ ನಡೆದ ಕೆಡಿಪಿ ಸಭೆಯಲ್ಲಿ ಬಹಳಷ್ಟು ರಸ್ತೆಗಳು ಹಾಳಾಗಿದ್ದು, ಗುಣಮಟ್ಟ ಪರಿಶೀಲಿಸುವುದಾಗಿ ಹೇಳಿದ್ದೆ. ಆ.22ರಂದು ಸಭೆ ನಡೆಸಿ ಡಿಸಿಸಿ ಬ್ಯಾಂಕ್ ಅವ್ಯವಹಾರದ ಬಗ್ಗೆ ಮಾಹಿತಿ ಪಡೆಯುವುದಾಗಿ ಹೇಳಿದ್ದೆ. ಈ ವಿಚಾರ ಗೊತ್ತಾಗುತ್ತಿದ್ದಂತೆ ಗುತ್ತಿಗೆದಾರರು ಬಾಕಿ ಹಣ ಪಾವತಿಸುವಂತೆ ಪ್ರತಿಭಟನೆ ನಡೆಸಿದ್ದಾರೆ. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅವರ ಮಾರ್ಗದರ್ಶನದಂತೆ ನನ್ನ ಹೆಸರನ್ನು ಪ್ರಸ್ತಾಪ ಮಾಡಿದ್ದಾರೆ’ ಎಂದು ತಿಳಿಸಿದರು.