ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿ ಆಗಸ್ಟ್ 23 ರೊಳಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಸಿಬಿಐಗೆ ನೋಟಿಸ್ ನೀಡಿದೆ.
ಇದೇ ವೇಳೆ ಅರವಿಂದ ಕೇಜ್ರಿವಾಲ್ ಅವರಿಗೆ ಮಧ್ಯಂತರ ಜಾಮೀನು ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಸಿಬಿಐ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಅರವಿಂದ ಕೇಜ್ರಿವಾಲ್ ಅವರು ಸೋಮವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು. ಇದಕ್ಕೂ ಮುನ್ನ ಕೇಜ್ರಿವಾಲ್ ಅವರು ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿತ್ತು. ಸಿಬಿಐ ನಿರ್ಧಾರವನ್ನು ಎತ್ತಿಹಿಡಿದ ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ಅವರು, ‘ಬಂಧನಕ್ಕೆ ತಡೆ ನೀಡಲು ಕೇಜ್ರಿವಾಲ್ ಸಮರ್ಪಕ ಕಾರಣ ನೀಡಿಲ್ಲ’ ಎಂದು ತಿಳಿಸಿದ್ದರು.
ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಹಣ ಅಕ್ರಮ ವರ್ಗಾವಣೆ ಪ್ರಕರಣದಡಿ ತಿಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್ ಅವರನ್ನು ಜೂನ್ 26ರಂದು ಸಿಬಿಐ ಬಂಧಿಸಿತ್ತು.