ಚಾಮರಾಜನಗರ(Chamarajanagara): ಕರ್ತವ್ಯ ಲೋಪ ಹಿನ್ನೆಲೆಯಲ್ಲಿ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಚಿಕ್ಕಾಟಿ ಗ್ರಾಮ ಪಂಚಾಯಿತಿಯ ಪಂಚಾಯಿತಿ ಅಭಿವೃದ್ದಿ ಅಧಿಕಾರಿ ಎನ್ ವಿಶ್ವನಾಥ ಎಂಬುವರನ್ನು ಅಮಾನತು ಮಾಡಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಆದೇಶ ಹೊರಡಿಸಿದ್ದಾರೆ.
ಕಳೆದ 22ರಂದು ಬೆಳಗ್ಗೆ 10.40ಕ್ಕೆ ಗ್ರಾಮ ಪಂಚಾಯಿತಿ ಕಚೇರಿಗೆ ಅನಿರೀಕ್ಷಿತ ಭೇಟಿ ನೀಡಿದ ವೇಳೆ ವಿಶ್ವನಾಥ ಅವರು ಅನಧಿಕೃತವಾಗಿ ಗೈರು ಹಾಜರಾಗಿದ್ದರು.
ಅಲ್ಲದೇ ಇ – ಸ್ವತ್ತು ಅರ್ಜಿ ವಿಲೇವಾರಿ ಮಾಡದಿರುವ ಬಗ್ಗೆ ಸಾರ್ವಜನಿಕರು ದೂರಿದ್ದರು. ದಾಖಲೆ ಕಡತಗಳ ಸಮರ್ಪಕ ನಿರ್ವಹಣೆ ಮಾಡದೇ ಇರುವುದು ಇತರೆ ಕರ್ತವ್ಯ ಲೋಪಗಳು ಕಂಡು ಬಂದ ಹಿನ್ನೆಲೆಯಲ್ಲಿ ಎನ್. ವಿಶ್ವನಾಥ ಅವರನ್ನು ಅಮಾನತು ಮಾಡಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.
ಅಕ್ಟೋಬರ್ ತಿಂಗಳಿನಲ್ಲಿ ಸಾರ್ವಜನಿಕರೊಬ್ಬರು ಖಾತೆ ಕುರಿತಂತೆ ಕೋರಿದ್ದ ಮಾಹಿತಿಯನ್ನು ನಿಗದಿತ ಸಮಯದಲ್ಲಿ ನೀಡದ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ರಾಜ್ಯ ಮಾಹಿತಿ ಆಯೋಗ ದಂಡ ವಿಧಿಸಿತ್ತು. ಹೊರಮಾವಿನ ಬಿಬಿಎಂಪಿ ಕಂದಾಯ ಅಧಿಕಾರಿ ದೊಡ್ಡ ಶಾಮಾಚಾರಿ ಅವರಿಗೆ ಆಯೋಗ 10 ಸಾವಿರ ರೂಪಾಯಿ ದಂಡ ವಿಧಿಸಿ ಆದೇಶಿಸಿತ್ತು.