ಪುಣೆ: ಹಿಂದೂ ದೇವತೆಗಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದಡಿ ಪುಣೆಯಲ್ಲಿ ಕಾಲೇಜು ಉಪನ್ಯಾಸಕರೊಬ್ಬರನ್ನು ಬಂಧಿಸಲಾಗಿದೆ.
ಹಿಂದೂ ದೇವತೆಗಳ ಬಗ್ಗೆ ಅವಹೇಳನ ಮಾಡಿದ್ದ ಉಪನ್ಯಾಸಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಹಾಗೂ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು.
ಅಶೋಕ್ ಧೋಲೆ ಎಂಬ ಉಪನ್ಯಾಸಕ ತರಗತಿಯಲ್ಲಿ ಉಪನ್ಯಾಸ ನೀಡುವ ವೇಳೆ ಅವಹೇಳನಕಾರಿ ಹೇಳಿಕೆ ನೀಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಬಗ್ಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದಂತೆಯೇ ಕಾಲೇಜು ಆಡಳಿತ ಮಂಡಳಿ ಉಪನ್ಯಾಸಕನನ್ನು ಅಮಾನತು ಮಾಡಿರುವುದಾಗಿ ತಿಳಿಸಿತ್ತು.
ಉಪನ್ಯಾಸಕ ಧೋಲೆ ಪಾಠ ಮಾಡುತ್ತಿದ್ದ ವೇಳೆ ವಿದ್ಯಾರ್ಥಿಗಳು ವಿಡಿಯೋ ಚಿತ್ರೀಕರಣ ಮಾಡಿರುವುದಾಗಿ ಕಾಲೇಜು ಪ್ರಾಂಶುಪಾಲರಾದ ಡಾ.ಹೃಷಿಕೇಶ್ ಸೋಮನ್ ತಿಳಿಸಿದ್ದಾರೆ. ಈ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ಹಿಂದೂಪರ ಸಂಘಟನೆಯ ಕಾರ್ಯಕರ್ತರು ಕಾಲೇಜಿಗೆ ಭೇಟಿ ನೀಡಿ ಉಪನ್ಯಾಸಕನ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಆಗ್ರಹಿಸಿತ್ತು.
ಭಾರತೀಯ ದಂಡ ಸಂಹಿತೆ ಸೆಕ್ಷನ್ 295ರ ಅಡಿ ಧೋಲೆಯನ್ನು ಬಂಧಿಸಲಾಗಿದ್ದು, ಶುಕ್ರವಾರ (ಆಗಸ್ಟ್ 04) ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಡೆಕ್ಕನ್ ಜಿಮ್ ಖಾನಾ ಪೊಲೀಸ್ ಠಾಣೆಯ ಹಿರಿಯ ಇನ್ಸ್ ಪೆಕ್ಟರ್ ವಿ.ವಿ.ಹಸಬ್ನೀಸ್ ತಿಳಿಸಿದ್ದಾರೆ.