ಧನಂಜಯ್ ನಟನೆಯ “ಕೋಟಿ’ ಚಿತ್ರ ಜೂನ್14ರಂದು ಬಿಡುಗಡೆಯಾಗುತ್ತಿದೆ. ಈಗಾಗಲೇ ಚಿತ್ರದ ಹಾಡುಗಳು ಹಾಗೂ ಟೀಸರ್ ಬಿಡುಗಡೆಯಾಗಿದ್ದು, ಈಗ ಚಿತ್ರತಂಡ ಟ್ರೇಲರ್ ಬಿಡುಗಡೆಗೆ ಮುಂದಾಗಿದೆ. ಜೂನ್ 5ರಂದು ಚಿತ್ರದ ಟ್ರೇಲರ್ ಬಿಡುಗಡೆಯಾಗಲಿದೆ. ಪರಮ್ ಈ ಸಿನಿಮಾದ ನಿರ್ದೇಶಕರು.
ಧನಂಜಯ್ ಈ ಸಿನಿಮಾ ಮೇಲೆ ಭರ್ಜರಿ ನಿರೀಕ್ಷೆ ಇಟ್ಟಿದ್ದಾರೆ. ಅದಕ್ಕೆ ಕಾರಣ ಸಿನಿಮಾದ ಕಥೆ. ಚಿತ್ರದ ಬಗ್ಗೆ ಮಾತನಾಡುವ ಧನಂಜಯ್, “ಒಂದೇ ಒಂದು ಕೋಟಿ ಸಿಕ್ಕಿಬಿಟ್ಟರೆ ಸೆಟ್ಲ ಆಗಿಬಿಡಬಹುದು ಎಂದು ಎಲ್ಲರೂ ಅಂದುಕೊಳ್ಳುತ್ತಾರೆ. ನಮ್ ಕೋಟಿನೂ ಅಷ್ಟೇ. ಎಲ್ಲಾ ಮನೆಗಳಲ್ಲೂ ಈ ಕೋಟಿಯಂಥ ಅಣ್ಣ, ತಮ್ಮ, ಮಗ ನಿಮಗೆ ಸಿಕ್ತಾರೆ. ಕಷ್ಟಪಟ್ಟು ದುಡಿದು ಎಲ್ಲಾ ಸರಿ ಮಾಡಬಹುದು ಎಂದುಕೊಳ್ಳುತ್ತಿರುತ್ತಾರೆ. ಮಜಾ ಅಂದ್ರೆ ಎಲ್ಲರೊಳಗೆ ಕೋಟಿಯಂಥ ಒಬ್ಬ ವ್ಯಕ್ತಿ ಇರುತ್ತಾನೆ. ಈ ಪಾತ್ರ, ನನ್ನೊಳಗಿನ ಕೋಟಿಯನ್ನು ನನಗೆ ಪರಿಚಯಿಸಿದೆ. ಹಾಗೆಯೇ ನಿಮ್ಮೊಳಗಿನ ಕೋಟಿಯನ್ನು ಪತ್ತೆ ಮಾಡಲು ನೀವು ಈ ಸಿನಿಮಾ ನೋಡಬೇಕು’ ಎನ್ನುತ್ತಾರೆ.
ಕೋಟಿ ಚಿತ್ರದ ತಾರಾಗಣದಲ್ಲಿ ಡಾಲಿ ಧನಂಜಯ ಜೊತೆ ನಾಯಕಿಯಾಗಿ ಮೋಕ್ಷಾ ಕುಶಾಲ್ ಇದ್ದಾರೆ. ಉಳಿದಂತೆ ಹಿರಿಯ ನಟರಾದ ರಂಗಾಯಣ ರಘು, ರಮೇಶ್ ಇಂದಿರಾ, ತಾರಾ, ಸರ್ದಾರ್ ಸತ್ಯ ಮುಂತಾದವರು ಅಭಿನಯಿಸಿದ್ದಾರೆ.
ಚಿತ್ರದಲ್ಲಿ ಐದು ಹಾಡುಗಳಿದ್ದು ವಾಸುಕಿ ವೈಭವ್ ರಾಗ ಸಂಯೋಜಿಸಿದ್ದಾರೆ. ಈ ಹಾಡುಗಳಿಗೆ ಯೋಗರಾಜ್ ಭಟ್ ಮತ್ತು ವಾಸುಕಿ ವೈಭವ್ ಸಾಹಿತ್ಯ ರಚಿಸಿದ್ದಾರೆ. ಹಿನ್ನೆಲೆ ಸಂಗೀತದ ಜವಾಬ್ದಾರಿಯನ್ನು ನೊಬಿನ್ ಪೌಲ್ ಹೊತ್ತಿದ್ದಾರೆ. ಪ್ರತೀಕ್ ಶೆಟ್ಟಿಯವರು ಕೋಟಿಯ ಸಂಕಲನಕಾರರಾದರೆ, ಅರುಣ್ ಛಾಯಾಗ್ರಹಣ ಚಿತ್ರಕ್ಕಿದೆ.














