ಬೆಂಗಳೂರು (Bengaluru): ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಒಂದು ತಿಂಗಳೊಳಗೆ ಡಿಜಿಟಲ್ ಹೆಸರು ನೋಂದಣಿ ಹಾಗೂ ಡಿಜಿಟಲ್ ಪಾವತಿ ವ್ಯವಸ್ಥೆ ತರಲಾಗುವುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.
ಬೆಂಗಳೂರಿನ ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರತಿ ವಾರ್ಡ್‌ಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ಜಯನಗರ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಹಲವು ಆಸ್ಪತ್ರೆಗಳು ಹಾಗೂ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಒಂದು ತಿಂಗಳೊಳಗೆ ಡಿಜಿಟಲ್ ಹೆಸರು ನೋಂದಣಿ ಹಾಗೂ ಡಿಜಿಟಲ್ ಪಾವತಿ ವ್ಯವಸ್ಥೆ ತರಲಾಗುವುದು. ಬಳಿಕ ತಾಲೂಕು ಆಸ್ಪತ್ರೆಗಳಲ್ಲೂ ಇದೇ ವ್ಯವಸ್ಥೆ ಜಾರಿ ಮಾಡಲಾಗುವುದು ಎಂದರು. ಇದೇ ವೇಳೆ ಆಸ್ಪತ್ರೆ ಅಭಿವೃದ್ಧಿಗೆ 5 ಕೋಟಿ ರೂ. ಅನುದಾನ ಒದಗಿಸುವುದಾಗಿ ತಿಳಿಸಿದರು.
ಜಯನಗರ ಸಾರ್ವಜನಿಕ ಆಸ್ಪತ್ರೆಯಲ್ಲಿ ಜನದಟ್ಟಣೆ ಕಡಿಮೆ ಮಾಡಲು, ವೈದ್ಯರ ಭೇಟಿಗೆ ಆನ್‌ಲೈನ್‌ನಲ್ಲಿ ಅಥವಾ ಮೊಬೈಲ್ ಸಂದೇಶ ಮೂಲಕ ಸಮಯ ನಿಗದಿ ಮಾಡಿಕೊಳ್ಳುವ ವ್ಯವಸ್ಥೆ ತರಲು ಸೂಚಿಸಲಾಗಿದೆ. ಆಸ್ಪತ್ರೆಯಲ್ಲಿ ಜನರ ಉದ್ದದ ಸಾಲು ಕಡಿಮೆ ಮಾಡಲು ಈ ಕ್ರಮ ವಹಿಸಲಾಗುತ್ತಿದೆ. ವೈದ್ಯರ ಆಪಾಯಿಂಟ್‌ಮೆಂಟ್ ಸಮಯ, ಯಾವ ವೈದ್ಯರು ಎಂಬಿತ್ಯಾದಿ ಮಾಹಿತಿಗಳನ್ನು ಮೊಬೈಲ್‌ಗೆ ಸಂದೇಶ ಕಳುಹಿಸುವ ವ್ಯವಸ್ಥೆ ತರಲಾಗುತ್ತಿದೆ. ಆಸ್ಪತ್ರೆಗೆ ಯಾರೂ ಬಂದು ಕಾಯುವ ಅಗತ್ಯವಿಲ್ಲ. ಹಾಗೆಯೇ ರಾಜ್ಯದ ಎಲ್ಲಾ ಜಿಲ್ಲಾಸ್ಪತ್ರೆಗಳಲ್ಲಿ ಜನರು ಬರುವ ಮುನ್ನವೇ ಆನ್‌ಲೈನ್ ನಲ್ಲಿ ಹೆಸರು ನೋಂದಾಯಿಸಿಕೊಳ್ಳುವ ಹಾಗೂ ಡಿಜಿಟಲ್ ಪಾವತಿ ಮಾಡುವ ವ್ಯವಸ್ಥೆ ತರಲಾಗುವುದು ಎಂದು ಹೇಳಿದರು.
51 ಹಾಸಿಗೆಗಳ ಐಸಿಯು ಇಲ್ಲಿದೆ. ಕೋವಿಡ್ ಬಳಿಕ ಇಲ್ಲಿ ಹಾಸಿಗೆಗಳ ಸಂಖ್ಯೆ ಹೆಚ್ಚಿಸಲಾಗಿದೆ. ಇದಕ್ಕೆ ಪೂರಕವಾಗಿ ಅಗತ್ಯ ಸಿಬ್ಬಂದಿಯನ್ನು ನೀಡಲಾಗುವುದು. ಖಾಯಂ ಸಿಬ್ಬಂದಿ ನೇಮಕಕ್ಕಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ನೀಡಲಾಗುವುದು. ನಾಲ್ಕು ಆರ್ಥೊಪೆಡಿಕ್ ತಜ್ಞರು ಈ ಆಸ್ಪತ್ರೆಯಲ್ಲಿದ್ದರೂ 40 ಪ್ರೊಸೀಜರ್ ಮಾತ್ರ ನಡೆಯುತ್ತಿದೆ. ಈ ಸಂಖ್ಯೆಯನ್ನು 100 ಕ್ಕೆ ಏರಿಸಿಕೊಳ್ಳಬೇಕು. ಹಾಗೆಯೇ ಸಭೆ ನಡೆಸಿ ವಿವಿಧ ವಿಭಾಗಗಳ ನಡುವೆ ಸಮನ್ವಯತೆ ತರಬೇಕು ಎಂದು ಸೂಚಿಸಲಾಗಿದೆ ಎಂದರು.
ಕೋವಿಡ್ ರೋಗಿಗಳಿಂದ ಹಣ ಪಡೆದು ಬಳಿಕ ಸರ್ಕಾರದಿಂದ ಹಣ ಪಡೆದ ಖಾಸಗಿ ಆಸ್ಪತ್ರೆಗಳಿಗೆ ನೋಟಿಸ್ ನೀಡಿ, ಹಣವನ್ನು ರೋಗಿಗಳಿಗೆ ಹಿಂದಿರುಗಿಸಲಾಗಿದೆ. ಇತಿಹಾಸದಲ್ಲಿ ಮೊದಲ ಬಾರಿಗೆ ಸರ್ಕಾರ ಈ ರೀತಿಯ ಕ್ರಮ ವಹಿಸಿ, 1.58 ಕೋಟಿ ರೂ. ಹಣವನ್ನು ರೋಗಿಗಳ ಕುಟುಂಬಕ್ಕೆ ವಾಪಸ್ ಮಾಡಲಾಗಿದೆ. ಇನ್ನು ಉಳಿದ ಮೊತ್ತವನ್ನು ಕೂಡ ವಾಪಸ್ ಕೊಡಿಸಲಾಗುವುದು. ಮೊತ್ತವನ್ನು ವಾಪಸ್ ಕೊಡಿಸುವವರೆಗೂ ಸರ್ಕಾರ ಬಿಡುವುದಿಲ್ಲ ಎಂದು ಸಚಿವ ಸುಧಾಕರ್ ಸ್ಪಷ್ಟಪಡಿಸಿದರು.