ಮನೆ ಕಾನೂನು ದೇಗುಲಗಳಿಗೆ ವ್ಯವಸ್ಥಾಪನಾ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

ದೇಗುಲಗಳಿಗೆ ವ್ಯವಸ್ಥಾಪನಾ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

0

ಬೆಂಗಳೂರು: ಮುಜರಾಯಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ಬಿ ಮತ್ತು ಸಿ ವರ್ಗದ ದೇವಾಲಯಗಳಿಗೆ ವ್ಯವಸ್ಥಾಪನ ಸಮಿತಿ ರಚನೆ ಮಾಡುವ ಸಂಬಂಧ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ಆಯುಕ್ತರು 2016ರ ಜುಲೈ 12ರಂದು ಹೊರಡಿಸಿದ್ದ ಅಧಿಸೂಚನೆ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ.

Join Our Whatsapp Group

ಈ ವಿಚಾರವಾಗಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ದೇವಸ್ಥಾನಗಳ ವ್ಯವಸ್ಥಾಪನ ಸಂಘ (ರಿ) 2016ರಲ್ಲಿ ಸಲ್ಲಿಸಿರುವ ಅರ್ಜಿಯು ನ್ಯಾಯಮೂರ್ತಿ ಎಂ.ಜಿ.ಎಸ್‌. ಕಮಾಲ್‌ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ಗುರುವಾರ ವಿಚಾರಣೆಗೆ ಬಂದಿತ್ತು. ಕೆಲವು ಕಾಲ ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ದೇವಸ್ಥಾನಗಳಿಗೆ ನಿರ್ವಹಣ ಸಮಿತಿಗಳ ರಚನೆಗೆ ಅವಕಾಶ ಮಾಡಿಕೊಡುವ ತಿದ್ದುಪಡಿ ಕಾಯ್ದೆಯನ್ನು ಅನೂರ್ಜಿತಗೊಳಿಸಿ, ಈ ಹಿಂದೆ ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ಹೊರಡಿಸಿದ ಆದೇಶಕ್ಕೆ ಸುಪ್ರೀಂ ಕೋರ್ಟ್‌ ಮಧ್ಯಾಂತರ ತಡೆಯಾಜ್ಞೆ ನೀಡಿರುವ ಹಿನ್ನೆಲೆಯಲ್ಲಿ ತಿದ್ದುಪಡಿ ಕಾಯ್ದೆಯಂತೆ ವ್ಯವಸ್ಥಾಪನ ಸಮಿತಿಗಳನ್ನು ರಚಿಸುವ ಅಧಿಕಾರ ಸರಕಾರ ಹೊಂದಿದೆ ಎಂದು ಅಭಿಪ್ರಾಯಪಟ್ಟು, ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿತು.

ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಹಾಗೂ ಧರ್ಮಾದಾಯ ದತ್ತಿಗಳ ಕಾಯ್ದೆ 1997ರ ಸೆಕ್ಷನ್‌ 25ಕ್ಕೆ 2011 ಹಾಗೂ 2012ರಲ್ಲಿ ತಿದ್ದುಪಡಿ ತಂದು ವ್ಯವಸ್ಥಾಪನ ಸಮಿತಿಗಳ ನೇಮಕಕ್ಕೆ ಅವಕಾಶ ಮಾಡಿಕೊಡಲಾಗಿತ್ತು. ಇದನ್ನು ಕೆಲವು ದೇವಾಲಯಗಳ ಪಾರಂಪರಿಕ ಟ್ರಸ್ಟಿಗಳು ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿದ್ದರು.

2015ರ ನವೆಂಬರ್‌ 17ರಂದು ಹೈಕೋರ್ಟ್‌ ವಿಭಾಗೀಯ ನ್ಯಾಯಪೀಠ ತಿದ್ದುಪಡಿ ಕಾಯ್ದೆಯನ್ನು ಅನೂರ್ಜಿತಗೊಳಿಸಿ ತೀರ್ಪು ನೀಡಿತ್ತು. ಅದನ್ನು ಸರಕಾರ ಸುಪ್ರೀಂ ಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. 2016ರ ಎಪ್ರಿಲ್‌ 8ರಂದು ವಿಭಾಗೀಯ ನ್ಯಾಯಪೀಠದ ತೀರ್ಪಿಗೆ ಸುಪ್ರೀಂ ಕೋರ್ಟ್‌ ತಡೆ ನೀಡಿತ್ತು. ಅದರ ಬಳಿಕ ತಿದ್ದುಪಡಿ ಕಾಯ್ದೆಯಂತೆ ಬಿ ಮತ್ತು ಸಿ ದೇವಸ್ಥಾನಗಳಿಗೆ ನಿರ್ವಹಣ ಸಮಿತಿಗಳನ್ನು ರಚಿಸಲು 2016ರ ಜುಲೈ 12ರಂದು ಅಧಿಸೂಚನೆ ಹೊರಡಿಸಲಾಗಿತ್ತು.

ಪರಂಪರಾಗತವಾಗಿ ದೇವಸ್ಥಾನಗಳನ್ನು ನಿರ್ವಹಣೆ ಮಾಡುತ್ತಿರುವ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ದೇವಸ್ಥಾನಗಳ ವ್ಯವಸ್ಥಾಪನ ಸಂಘ ಈ ಅಧಿಸೂಚನೆ ಪ್ರಶ್ನಿಸಿ ಹೈಕೋರ್ಟ್‌ ಮೆಟ್ಟಿಲೇರಿತ್ತು.