ಮನೆ ಕಾನೂನು ಜಿಲ್ಲಾಧಿಕಾರಿ ಕರ್ತವ್ಯಕ್ಕೆ ಅಡ್ಡಿ: ವಕೀಲ ದೇವರಾಜೇಗೌಡ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್‌ ನಿರ್ದೇಶನ

ಜಿಲ್ಲಾಧಿಕಾರಿ ಕರ್ತವ್ಯಕ್ಕೆ ಅಡ್ಡಿ: ವಕೀಲ ದೇವರಾಜೇಗೌಡ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಹೈಕೋರ್ಟ್‌ ನಿರ್ದೇಶನ

0

ಹಾಸನ ಜಿಲ್ಲಾಧಿಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ ಆರೋಪದಡಿ ದಾಖಲಾಗಿರುವ ಪ್ರಕರಣದ ಸಂಬಂಧ ವಕೀಲ ಜಿ ದೇವರಾಜೇಗೌಡ ವಿರುದ್ಧ ಪೊಲೀಸರು ಯಾವುದೇ ಬಲವಂತದ ಕ್ರಮ ಕೈಗೊಳ್ಳಬಾರದು ಎಂದು ಕರ್ನಾಟಕ ಹೈಕೋರ್ಟ್‌ ಸೋಮವಾರ ಆದೇಶಿಸಿದೆ.

Join Our Whatsapp Group

ಹಾಸನ ಜಿಲ್ಲಾಧಿಕಾರಿ ಸತ್ಯಭಾಮ ನೀಡಿರುವ ದೂರಿನ ಮೇರೆಗೆ ದಾಖಲಿಸಿರುವ ಎಫ್‌ಐಆರ್‌ ರದ್ದುಗೊಳಿಸಬೇಕು ಎಂದು ಕೋರಿ ಜಿ ದೇವರಾಜೇಗೌಡ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠ ವಿಚಾರಣೆ ನಡೆಸಿತು.

ದೇವರಾಜೇಗೌಡ ಪರ ಹಿರಿಯ ವಕೀಲೆ ಪ್ರಮೀಳಾ ನೇಸರ್ಗಿ ಹಾಗೂ ವಕೀಲ ಶಶಿಧರ ಬೆಳಗುಂಬ ಅವರು “ಅರ್ಜಿದಾರರ ವಿರುದ್ಧ ಪೊಲೀಸರು ಬಲವಂತದ ಕ್ರಮ ಕೈಗೊಳ್ಳಲು ತುದಿಗಾಲಲ್ಲಿ ನಿಂತಿದ್ದಾರೆ. ವಿನಾಕಾರಣ ಅವರಿಗೆ ನೋಟಿಸ್‌ ನೀಡಿ ಕಿರುಕುಳ ನೀಡಲಾಗುತ್ತಿದೆ” ಎಂದರು.

ಇದಕ್ಕೆ ಪೀಠವು “ಇದು ಯಾವ ಪ್ರಕರಣ” ಎಂದು ಪ್ರಶ್ನಿಸಿತು. ಶಶಿಧರ ಬೆಳಗುಂಬ “ಅರ್ಜಿದಾರರು ಹೈಕೋರ್ಟ್‌ ವಕೀಲರು. ಹಾಸನ ಜಿಲ್ಲಾಧಿಕಾರಿ ಕರ್ತವ್ಯಕ್ಕೆ ಅಡ್ಡಿ ಉಂಟುಮಾಡಿದ ಆರೋಪದಡಿ ಅವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆʼ ಎಂದರು. ಈ ವೇಳೆ ಹೆಚ್ಚುವರಿ ವಿಶೇಷ ಸರ್ಕಾರಿ ಅಭಿಯೋಜಕ ಬಿ ಎನ್‌ ಜಗದೀಶ್‌ ಅವರು “ಅರ್ಜಿದಾರರ ವಿರುದ್ಧ ಇದೊಂದೇ ಅಲ್ಲ. ಹಲವು ಪ್ರಕರಣಗಳಿವೆ. ಹಾಸನದಲ್ಲಿ ಪೆನ್‌ಡ್ರೈವ್‌ ಹಂಚಿಕೆ ಮಾಡಿದ ಆರೋಪವು ಅವರ ಮೇಲಿದೆ. ಈ ಸಂಬಂಧ ದಾಖಲೆಗಳನ್ನು ಸಲ್ಲಿಸಲಾಗುವುದು” ಎಂದರು.

ಇದನ್ನು ಆಲಿಸಿದ ಪೀಠವು “ಅರ್ಜಿದಾರರ ವಿರುದ್ಧ ಯಾವುದೇ ಬಲವಂತದ ಕ್ರಮಕ್ಕೆ ಮುಂದಾಗಬಾರದು” ಎಂದು ಆದೇಶಿಸಿ, ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ: ದೇವರಾಜೇಗೌಡ ಅವರು ನನ್ನ ಅನುಮತಿ ಇಲ್ಲದೆ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿ ನಡೆಸಿ ನಿಂದಿಸಿದ್ದಾರೆ. ಈ ಮೂಲಕ ಸಾರ್ವಜನಿಕರ ಕರ್ತವ್ಯಕ್ಕೆ ಅಡ್ಡಿ ಉಂಟು ಮಾಡಿದ್ದಾರೆ” ಎಂದು ಆರೋಪಿಸಿ ಹಾಸನ ನಗರ ಪೊಲೀಸ್‌ ಠಾಣೆಯಲ್ಲಿ 2024ರ ಮಾರ್ಚ್ 19ರಂದು ಹಾಸನ ಜಿಲ್ಲಾಧಿಕಾರಿ ಅವರು ದೂರು ದಾಖಲಿಸಿದ್ದರು.

ಚನ್ನರಾಯಪಟ್ಟಣ ಆದ್ಯಾಸ್‌ ಬಾರ್‌ ಅಂಡ್ ರೆಸ್ಟೊರೆಂಟ್‌ ಕಳೆದ ಆರು ತಿಂಗಳಿನಿಂದ ಕಾನೂನು ಬಾಹಿರವಾಗಿ ಕಾರ್ಯ ನಿರ್ವಹಿಸುತ್ತಿದೆ. ಅಬಕಾರಿ ಇಲಾಖೆ ಆಯುಕ್ತರು ತನಿಖೆ ನಡೆಸಿ ನಿಯಮ ಉಲ್ಲಂಘಿಸಿರುವುದು ದೃಢಪಟ್ಟಿದ್ದು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿಗೆ ವರದಿ ಮಾಡಲಾಗಿರುತ್ತದೆ. ಆದರೆ, ಜಿಲ್ಲಾಧಿಕಾರಿ ಸತ್ಯಭಾಮ, ಬಾರ್‌ ಅಂಡ್‌ ರೆಸ್ಟೊರೆಂಟ್‌ ವಿರುದ್ಧ ಕ್ರಮ ಕೈಗೊಳ್ಳುವ ಬದಲಿಗೆ, ಕಡತಗಳನ್ನು ತಮ್ಮ ಬಳಿಯೇ ಇರಿಸಿಕೊಂಡು ಅವ್ಯವಹಾರಗಳನ್ನು ಮಾಡುತ್ತಿರುವವರ ಪರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ದೇವರಾಜೇಗೌಡ ಅವರು 15 ಮಾರ್ಚ್‌ 2024ರಂದು ನಡೆಸಿದ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದ್ದಾರೆ ಎಂದು ಸತ್ಯಭಾಮ ತಮ್ಮ ದೂರಿನಲ್ಲಿ ವಿವರಿಸಿದ್ದರು. ಈ ದೂರಿನ ಅನ್ವಯ ಪೊಲೀಸರು ಐಪಿಸಿ ಸೆಕ್ಷನ್‌ 353ರ ಅಡಿಯಲ್ಲಿ ಎಫ್‌ಐಆರ್‌ ದಾಖಲಿಸಿದ್ದಾರೆ.