ಮನೆ ಕಾನೂನು ಪತ್ನಿಯನ್ನು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ ನೀಡಿದ ವೈದ್ಯ ಪತಿ

ಪತ್ನಿಯನ್ನು ಗೃಹಬಂಧನದಲ್ಲಿಟ್ಟು ಚಿತ್ರಹಿಂಸೆ ನೀಡಿದ ವೈದ್ಯ ಪತಿ

0

ಚಿಕ್ಕಮಗಳೂರು: ಪತ್ನಿಯನ್ನು ಗೃಹಬಂಧನದಲ್ಲಿಟ್ಟು ಪತಿ ಕಿರುಕುಳ ನೀಡಿರುವ ಘಟನೆ ಚಿಕ್ಕಮಗಳೂರು ನಗರದ ದೋಣಿಕಣ ಬಡಾವಣೆಯಲ್ಲಿ ನಡೆದಿದೆ.

Join Our Whatsapp Group

ಇದೀಗ ಗೃಹಬಂಧನದಲ್ಲಿದ್ದ ಮಹಿಳೆಯನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ವೈದ್ಯನೊಬ್ಬ ತನ್ನ ಪತ್ನಿಯನ್ನು ಮನೆಯಲ್ಲೇ ಬಂಧಿಸಿ ಚಿತ್ರಹಿಂಸೆ ನೀಡಿದ್ದಾನೆ ಎಂದು ಆರೋಪಿಸಲಾಗಿದೆ. ಈ ಬಗ್ಗೆ ಮಹಿಳೆ ಚಿಕ್ಕಮಗಳೂರು ಮಹಿಳಾ ಠಾಣೆಯಲ್ಲಿ ದೂರು ನೀಡಿದ್ದು, ಇದೀಗ ಈ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇನ್ನು ಪೊಲೀಸರಿಗೆ ಈ ಸುದ್ದಿ ತಿಳಿಯುತ್ತಿದ್ದಂತೆ ಮಹಿಳೆಯ ಪತಿ ರವಿಕುಮಾರ್ ನಾಪತ್ತೆಯಾಗಿದ್ದಾನೆ. ಮಹಿಳೆಯನ್ನು ಚಿಕ್ಕಮಗಳೂರು ಮಲ್ಲೇಗೌಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರವಿಕುಮಾರ್ ವೃತ್ತಿಯಲ್ಲಿ ವೈದ್ಯರಾಗಿದ್ದು, ಡಾ. ರವಿಕುಮಾರ್ ಹಾಸನದ ಸರ್ಕಾರಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ಎಂದು ಹೇಳಲಾಗಿದೆ. 22 ವರ್ಷಗಳ ಹಿಂದೆ ಡಾ.ರವಿಕುಮಾರ್, ವಿನುತಾರಾಣಿ (48) ಅವರನ್ನು ವಿವಾಹವಾಗಿದ್ದ. ನಂತರ ಇಬ್ಬರ ನಡುವೆ ಮನಸ್ತಾಪ ಉಂಟಾಗಿ ಇಬ್ಬರು ಬೇರೆಯಾಗಿದ್ದಾರೆ. ಕಳೆದ 1 ವರ್ಷದ ಹಿಂದೆ ವಿನುತಾರಾಣಿ ಅವರಿಗೆ ಡಾ.ರವಿಕುಮಾರ್ ವಿಚ್ಛೇದನ ನೀಡಿದ್ದಾರೆ.

ವಿನುತಾ ರಾಣಿ ಮೂಲತಃ ಶಿವಮೊಗ್ಗದ ವಿನೋಬಾನಗರದವರು, ಆದರೆ ವಿಚ್ಛೇದನ ನೀಡಿ ಕೂಡಾ ಆಕೆಯನ್ನು ಮನೆಯಲ್ಲಿ ಕೂಡಿ ಹಾಕಿದ್ದಾನೆ ಎಂದು ವಿನುತಾ ರಾಣಿ ಅವರ ಮನೆಯವರು ಆರೋಪಿಸಿದ್ದಾರೆ. ಡಾ.ರವಿಕುಮಾರ್ ವಿನುತಾ ರಾಣಿಗೆ ಚಿತ್ರಹಿಂಸೆ ನೀಡಿರುವ ಬಗ್ಗೆಯೂ ದೂರಿನಲ್ಲಿ ತಿಳಿಸಲಾಗಿದೆ. ಆಕೆಯ ಗಂಡ ಊಟದಲ್ಲಿ ಮತ್ತಿನ ಔಷಧ ನೀಡುತ್ತಿದ್ದ, ಜತೆಗೆ ಮನೆಯಲ್ಲೇ ಬಂಧಿಸಿ ಚಿತ್ರಹಿಂಸೆ ನೀಡುತ್ತಿದ್ದ ಎಂದು ಆರೋಪಿಸಿದ್ದಾರೆ. ಇದೀಗ ಮಹಿಳೆಯ ಕುಟುಂಬದವರು ಚಿಕ್ಕಮಗಳೂರು ಜಿಲ್ಲಾಡಳಿತಕ್ಕೆ ದೂರು ನೀಡಿದ್ದು, ಬಂಧಿಸುವಂತೆ ಒತ್ತಾಯಿಸಿದ್ದಾರೆ.

ವಿನುತಾ ರಾಣಿ ತೀವ್ರ ಅಸ್ವಸ್ಥಗೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಪೊಲೀಸರು ಕುಟುಂಬ ಹಾಗೂ ಮಹಿಳೆಯ ಹೇಳಿಕೆ ಆಧಾರದ ಮೇಲೆ ದೂರು ದಾಖಲಿಸಿಕೊಂಡು ನಾಪತ್ತೆಯಾಗಿರುವ ಡಾ.ರವಿಕುಮಾರ್​​​ನ ಪತ್ತೆಗಾಗಿ ಕಾರ್ಯಚರಣೆ ನಡೆಸುತ್ತಿದ್ದಾರೆ.