ಮನೆ ರಾಜ್ಯ ಈ ವರ್ಷ ಹೆಚ್ಚಿನ ಅನುದಾನದ ನಿರೀಕ್ಷೆ ಬೇಡ: ಶಾಸಕರಿಗೆ ಸಿಎಂ ಸೂಚನೆ

ಈ ವರ್ಷ ಹೆಚ್ಚಿನ ಅನುದಾನದ ನಿರೀಕ್ಷೆ ಬೇಡ: ಶಾಸಕರಿಗೆ ಸಿಎಂ ಸೂಚನೆ

0

ಬೆಂಗಳೂರು: ಐದು ಗ್ಯಾರಂಟಿ ಯೋಜನೆಗಳ ಜಾರಿಗೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದ್ದು, ಈ ವರ್ಷ ತಮ್ಮ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನವನ್ನು ನಿರೀಕ್ಷಿಸಬೇಡಿ ಎಂದು ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಸೂಚಿಸಿದ್ದಾರೆ.

ಅನುದಾನ ಬಿಡುಗಡೆ ವಿಚಾರದಲ್ಲಿ ಸಚಿವರು ಹಾಗೂ ಶಾಸಕರ ನಡುವೆ ಎದುರಾಗಿರುವ ಭಿನ್ನಾಭಿಪ್ರಾಯಗಳ ನಿವಾರಿಸಲು ನಿನ್ನೆಯಷ್ಟೇ ಸಿದ್ದರಾಮಯ್ಯ ಅವರು,  ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರ ಜತೆ ಸಭೆ ನಡೆಸಿದರು.

ಮುಖ್ಯಮಂತ್ರಿಗಳು ತುಮಕೂರು, ಯಾದಗಿರಿ, ಚಿತ್ರದುರ್ಗ, ಬಾಗಲಕೋಟೆ, ಬಳ್ಳಾರಿ, ಧಾರವಾಡ ಜಿಲ್ಲೆಗಳ ಶಾಸಕರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡಿದರು.

ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕೆ ಹಣ ಬಿಡುಗಡೆ ವಿಳಂಬ, ಜಿಲ್ಲಾ ಉಸ್ತುವಾರಿ ಸಚಿವರ ನಡುವೆ ಸಮನ್ವಯದ ಕೊರತೆ ಮುಂತಾದ ಸಮಸ್ಯೆಗಳ ಕುರಿತು ಸಚಿವರು ಹಾಗೂ ಶಾಸಕರೊಂದಗೆ ಮಾತುಕತೆ ನಡೆಸಿದರು.

ಶಾಸಕರು ಹಾಗೂ ಸಚಿವರ ಸಮಸ್ಯೆಗಳ ಆಲಿಸಿದ ಬಳಿಕ ಪರಿಹಾರಕ್ಕೆ ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದರು ಎಂದು ಮುಖ್ಯಮಂತ್ರಿಗಳ ಕಚೇರಿ ಮಾಹಿತಿ ನೀಡಿದೆ.

ಅಲ್ಲದೆ, ಕ್ಷೇತ್ರಗಳಲ್ಲಿ ಅಭಿವೃದ್ಧಿ ಕಾಮಗಾರಿಗಳ ಕೈಗೊಳ್ಳಲು ಹಣ ಬಿಡುಗಡೆಗೆ ಇನ್ನೂ ಸ್ವಲ್ಪ ಸಮಯ ಕಾಯುವಂತೆ ತಿಳಿಸಿದ್ದಾರೆಂದು ಮೂಲಗಳು ತಿಳಿಸಿವೆ.

ಅನೇಕ ಶಾಸಕರು ತಮ್ಮ ಕ್ಷೇತ್ರಗಳಿಗೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಅನುದಾನ ಬಿಡುಗಡೆ ಮಾಡುವಂತೆ ಮನವಿ ಮಾಡಿಕೊಂಡರು. ಆದರೆ ಐದು ಗ್ಯಾರಂಟಿ ಯೋಜನೆಗಳಿಗೆ ಹೆಚ್ಚಿನ ಆದ್ಯತೆ ನೀಡುತ್ತಿರುವುದರಿಂದ ಕನಿಷ್ಠ ಎಂಟು ತಿಂಗಳಾದರೂ ಕಾಯುವಂತೆ, ಹಂತ ಹಂತವಾಗಿ ಅನುದಾನ ಬಿಡುಗಡೆ ಮಾಡಲಾಗುವುದು ಎಂದು ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ.