ಬೆಂಗಳೂರು: ಇಬ್ಬರೂ ಸಹ ಮಾಧ್ಯಮಗಳ ಮುಂದೆ ಹೋಗಬಾರದು. ಸಾಮಾಜಿಕ ಜಾಲತಾಣದಲ್ಲಿ ಏನನ್ನೂ ಪೋಸ್ಟ್ ಮಾಡಬಾರದು ಎಂದು ಐಪಿಎಸ್ ಅಧಿಕಾರಿ ಡಿ.ರೂಪಾ ಮೌದ್ಗಿಲ್ ಮತ್ತು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ರಾಜ್ಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ತಾಕೀತು ಮಾಡಿದ್ದಾರೆ.
ಐಎಎಸ್ ಹಾಗೂ ಐಪಿಎಸ್ ಅಧಿಕಾರಿಗಳ ನಡುವಿನ ಕಿತ್ತಾಟಕ್ಕೆ ಸಂಬಂಧಿಸಿದಂತೆ ನೋಟಿಸ್ ನೀಡುವಂತೆ ರಾಜ್ಯ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಗೆ ಸಿಎಂ ಬೊಮ್ಮಾಯಿ ಸೂಚಿಸಿದ್ದರು.
ಈ ಬೆನ್ನಲ್ಲೆ ಐಎಎಸ್ ಅಧಿಕಾರಿ ರೋಹಿಣಿ ಸಿಂದೂರಿ ಅವರು ಸಿಎಸ್ ವಂದಿತಾ ಶರ್ಮಾರನ್ನು ಭೇಟಿಯಾಗಿ ಡಿ.ರೂಪಾ ಅವರ ವಿರುದ್ಧ ದೂರು ಸಲ್ಲಿಸಿದ್ದರು.
ನಂತರ ಐಪಿಎಸ್ ಅಧಿಕಾರಿ ಡಿ.ರೂಪಾ ಅವರೂ ಸಹ ಸಿಎಸ್ ವಂದಿತಾ ಶರ್ಮಾ ಅವರನ್ನ ಭೇಟಿಯಾಗಿ ರೋಹಿಣಿ ಸಿಂಧೂರಿ ಅವರ ವಿರುದ್ಧ ದೂರು ನೀಡಿದರು.
ಇಬ್ಬರು ಅಧಿಕಾರಿಗಳ ದೂರು ಸ್ವೀಕರಿಸಿದ ಬಳಿಕ ಪ್ರತಿಕ್ರಿಯಿಸಿರುವ ಸಿಎಸ್ ವಂದಿತಾ ಶರ್ಮಾ, ನಿಮ್ಮಿಬ್ಬರ ನಡೆಯಿಂದ ರಾಜ್ಯ ಸರ್ಕಾರಕ್ಕೆ ಮುಜುಗರವಾಗಿದೆ. ಈ ವಿಚಾರಗಳನ್ನು ವೈಯಕ್ತಿಕವಾಗಿ ತೆಗೆದುಕೊಂಡು ಹೋಗಬಾರದು. ಸೋಷಿಯಲ್ ಮೀಡಿಯಾದಲ್ಲಿ ಏನನ್ನು ಪೋಸ್ಟ್ ಮಾಡಬಾರದು. ಇಬ್ಬರೂ ಸಹ ಮಾಧ್ಯಮಗಳ ಮುಂದೆ ಹೋಗಬಾರದು ಎಂದು ತಾಕೀತು ಮಾಡಿದ್ದಾರೆ.














