ಬೆಂಗಳೂರು(Bengaluru): ಪಿಎಸ್ ಐ ನೇಮಕಾತಿ ಅಕ್ರಮದಲ್ಲಿ ಉನ್ನತ ಶಿಕ್ಷಣ ಸಚಿವ ಡಾ ಸಿ ಎನ್ ಅಶ್ವಥ್ ನಾರಾಯಣ ಅವರ ಸೋದರ ಭಾಗಿಯಾಗಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಇಂದು ಸಚಿವ ಡಾ.ಅಶ್ವತ್ಥ್ ನಾರಾಯಣ ಕಚೇರಿಗೆ ಎನ್ ಎಸ್ ಯು ಐ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸಿದರು.
ಸಚಿವರ ಕಚೇರಿ ಬಳಿ ಬ್ರೀಫ್ ಕೇಸ್ನಿಂದ ಹಣ ತೆಗೆದು ಎಸೆಯುವ ಅಣಕು ಪ್ರತಿಭಟನೆ ನಡೆಸಿದ ಎನ್ ಎಸ್ ಯು ಐ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. 40 ಪರ್ಸೆಂಟ್ ಸರ್ಕಾರಕ್ಕೆ ಧಿಕ್ಕಾರ, ನ್ಯಾಯ ಬೇಕು, ಉನ್ನತ ಶಿಕ್ಷಣ ಸಚಿವರು ರಾಜೀನಾಮೆ ನೀಡಬೇಕೆಂದು ಕಾರ್ಯಕರ್ತರು ಘೋಷಣೆ ಕೂಗಿದರು.
ಇನ್ನೊಂದೆಡೆ ಡಾ ಸಿ ಎನ್ ಅಶ್ವಥ್ ನಾರಾಯಣ ಅವರ ಮಲ್ಲೇಶ್ವರದ 13ನೇ ಕ್ರಾಸ್ ನ ನಿವಾಸ ಮುಂದೆ ಕಾಂಗ್ರೆಸ್ ಪ್ರತಿಭಟನೆಯನ್ನು ನಡೆಸುತ್ತಿದೆ. ಪರೀಕ್ಷೆಯಲ್ಲಿ ಅಕ್ರಮ ಖಂಡಿಸಿ ಕಾಂಗ್ರೆಸ್ ನಾಯಕರು, ಅಭ್ಯರ್ಥಿಗಳು ಆಕ್ರೋಶ ಹೊರಹಾಕುತ್ತಿದ್ದಾರೆ, ನ್ಯಾಯವಾಗಿ ಪರೀಕ್ಷೆ ಬರೆದ ಅಭ್ಯರ್ಥಿಗಳಿಗೆ ಸರ್ಕಾರ ಪರೀಕ್ಷಾ ಪ್ರಕ್ರಿಯೆ ರದ್ದು ಮಾಡಿ ಅನ್ಯಾಯವಾಗಿದೆ ಎಂದು ಕಾಂಗ್ರೆಸ್ ಮತ್ತು ಪರೀಕ್ಷೆ ಬರೆದ ವಿದ್ಯಾರ್ಥಿಗಳು ಆರೋಪಿಸುತ್ತಿದ್ದಾರೆ.
ಲಕ್ಷಗಟ್ಟಲೆ, ಕೋಟಿಗಟ್ಟಲೆ ಹಣಕ್ಕೆ ಪಿಎಸ್ಐ ಹುದ್ದೆ ಸೇರಿದಂತೆ ಸರ್ಕಾರಿ ಹುದ್ದೆಗಳು ಬಿಕರಿಯಾಗುತ್ತಿವೆ. ಸಚಿವ ಅಶ್ವಥ್ ನಾರಾಯಣ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂಬ ಆಗ್ರಹ ಜೋರಾಗಿದೆ.