ಮನೆ ರಾಜ್ಯ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಡ್ರೋನ್, ಕ್ಯಾಮರಾ ಚಿತ್ರೀಕರಣ ನಿಷೇಧ

ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಡ್ರೋನ್, ಕ್ಯಾಮರಾ ಚಿತ್ರೀಕರಣ ನಿಷೇಧ

0

ಗುಂಡ್ಲುಪೇಟೆ(ಚಾಮರಾಜನಗರ): ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶದಲ್ಲಿ ಡ್ರೋನ್ ಮತ್ತು ಕ್ಯಾಮರಾ ಚಿತ್ರೀಕರಣಕ್ಕೆ ತಹಶೀಲ್ದಾರ್ ಟಿ.ರಮೇಶ್ ಬಾಬು ನಿಷೇಧ ಹೇರಿ ಆದೇಶ ಹೊರಡಿಸಿದ್ದಾರೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಜೋನ್‍ನಲ್ಲಿರುವ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನಕ್ಕೆ ಅತಿ ಹೆಚ್ಚು ಭಕ್ತರು, ಪ್ರವಾಸಿಗರು, ಭೇಟಿ ನೀಡುತ್ತಿದ್ದಾರೆ. ಆದರೆ ಇತ್ತೀಚಿನ ದಿನಗಳಲ್ಲಿ ಪ್ರವಾಸಿಗರು ಮತ್ತು ಭಕ್ತರ ಸಂಖ್ಯೆ ಹೆಚ್ಚಾಗುತ್ತದೆ. ಸಂಜೆ ವೇಳೆ ದೇವಾಲಯದ ಹತ್ತಿರ ಬರುವ ಕಾಡಾನೆಯ ಬಳಿ ಪ್ರವಾಸಿಗರು ಅದರ ಸನಿಹಕ್ಕೆ ತೆರಳಿ ಛಾಯಾಚಿತ್ರ ತೆಗೆಯುವುದು, ಸೆಲ್ಪಿ ಕ್ಲಿಕ್ಕಿಸಿಕೊಂಡು ತುಣುಕುಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುತ್ತಿರುವ ಕಾರಣ ಆಕ್ರೋಶ ವ್ಯಕ್ತವಾಗಿತ್ತು. ಈ ಮಧ್ಯೆ ಕಾಡಾನೆಯಿಂದ ಪ್ರವಾಸಿಗರಿಗೂ ಸಹ ತೊಂದರೆಯಾಗುತ್ತಿತ್ತು. ಇದನ್ನು ಮನಗಂಡ ಗೋಪಾಲಸ್ವಾಮಿ ಬೆಟ್ಟ ವಲಯದ ಮೇಲುಕಾಮನಹಳ್ಳಿ ವಲಯ ಅರಣ್ಯಧಿಕಾರಿಗಳು ತಹಸೀಲ್ದಾರ್ ಹಾಗೂ ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದರು.

ಅರಣ್ಯಾಧಿಕಾರಿ ಕೋರಿಕೆ ಮೇರೆಗೆ ಮುಂಜಾಗ್ರತಾ ಕ್ರಮವಾಗಿ ಹಿಮವದ್ ಗೋಪಾಲಸ್ವಾಮಿ ದೇವಸ್ಥಾನದ ಸುತ್ತಮುತ್ತ ಪ್ರದೇಶದಲ್ಲಿ ಕಾಡುಪ್ರಾಣಿಗಳ ಕ್ಯಾಮರಾ ಚಿತ್ರೀಕರಣ ಹಾಗೂ ಡ್ರೋನ್ ಬಳಕೆ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಿ ಮುಜರಾಯಿ ಇಲಾಖೆಯ ಅಧಿಕಾರಿ ಹಾಗೂ ತಹಶೀಲ್ದಾರ್ ಟಿ.ರಮೇಶ್ ಬಾಬು ಆದೇಶ ಹೊರಡಿಸಿದ್ದಾರೆ.

ಕೆಲ ದಿನಗಳ ಹಿಂದೆ ಹಿರಿಯ ಪತ್ರಕರ್ತ ವಿಶ್ವೇಶ್ವರ ಭಟ್ ನಿಷೇಧಿತ ವಲಯ ಗೋಪಾಲಸ್ವಾಮಿ ಬೆಟ್ಟದಲ್ಲಿ ಸಂಜೆ ವೇಳೆ ಡ್ರೋನ್ ಬಳಸಿ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶ ಹಾಗೂ ಪ್ರತಿನಿತ್ಯ ದೇವಸ್ಥಾನದ ಬಳಿ ಬರುವ ಕಾಡಾನೆಯ ದೃಶ್ಯವನ್ನು ಸೆರೆ ಹಿಡಿದು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಇದು ಪರಿಸರವಾದಿಗಳ ಆಕ್ರೋಶಕ್ಕೆ ಕಾರಣವಾಗಿತ್ತು.

ಜೊತೆಗೆ ಅರಣ್ಯಾಧಿಕಾರಿಗಳ ವಿರುದ್ಧ ಸಾರ್ವಜನಿಕರು ಮತ್ತು ವನ್ಯಜೀವಿ ತಜ್ಞರು ಆಕ್ರೋಶ ಹೊರಹಾಕಿ ಕ್ರಮಕ್ಕೆ ಒತ್ತಾಯಿಸಿದ್ದರು. ಇದರಿಂದ ಬೆಟ್ಟದಲ್ಲಿ ಡ್ರೋನ್ ಬಳಕೆ ನಿಷೇಧ ಕುರಿತು ಕೂಗು ಹೆಚ್ಚಿನ ರೀತಿಯಲ್ಲಿ ಕೇಳಿಬಂದಿತ್ತು. ಇದರಿಂದ ಎಚ್ಛೆತ್ತ ತಹಸೀಲ್ದಾರ್ ಟಿ.ರಮೇಶ್ ಬಾಬು ಅರಣ್ಯಧಿಕಾರಿಗಳ ಮನವಿ ಮೇರೆಗೆ ಡ್ರೋನ್ ಬಳಕೆ ನಿಷೇಧ ಆದೇಶ ಹೊರಡಿಸಿದ್ದಾರೆ. ಈ ಆದೇಶ ಸಾರ್ವಜನಿಕ ವಲಯ ಹಾಗು ಪರಿಸರ ವಾದಿಗಳ ಮೆಚ್ಚುಗೆಗೆ ಪಾತ್ರವಾಗಿದೆ.

ಹಿಂದಿನ ಲೇಖನಅಯೋಧ್ಯೆಯಲ್ಲಿ ವಾಲ್ಮೀಕಿ ಮಂದಿರ ನಿರ್ಮಾಣ ಆಗಲಿದೆ: ಬಸವರಾಜ್ ಬೊಮ್ಮಾಯಿ
ಮುಂದಿನ ಲೇಖನಒಂದು ಹುದ್ದೆಗಾಗಿ ಇಬ್ಬರು ಅಧಿಕಾರಿಗಳ ನಡುವೆ ಜಟಾಪಟಿ: ಸಾರ್ವಜನಿಕರು ಹೈರಾಣ