ಬೆಂಗಳೂರು : ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವ ಪರಿಣಾಮವಾಗಿ ರಾಜ್ಯದ ಹಲವೆಡೆ ಭಾರೀ ಮಳೆಯ ಮುನ್ಸೂಚನೆ ನೀಡಲಾಗಿದೆ. ಹವಾಮಾನ ಇಲಾಖೆ ವರದಿಯಂತೆ ಮುಂದಿನ ಮೂರು ದಿನಗಳು ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ಗಾಳಿ ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಜನತೆಗೆ ಎಚ್ಚರಿಕೆ ನೀಡಲಾಗಿದೆ.
ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ‘ರೆಡ್ ಅಲರ್ಟ್’ ಘೋಷಿಸಲಾಗಿದೆ. ಈ ಜಿಲ್ಲೆಗಳಲ್ಲಿ ಗಾಳಿ, ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಾಸನ, ಕೊಡಗು, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹೊರಡಿಸಲಾಗಿದೆ. ಉಳಿದಂತೆ ರಾಜ್ಯದ ಬಹುತೇಕ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇವುಗಳಲ್ಲಿ ಮಿತಿ ಮೀರಿದ ಮಳೆಯಾಗದಿದ್ದರೂ, ತೀವ್ರ ಗಾಳಿ, ನಿರಂತರ ಮಳೆ ಇತ್ಯಾದಿಗಳ ಶಂಕೆ ಇದೆ.
ಬುಧವಾರವೂ ರಾಜ್ಯದ ಬಹುಪಾಲು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ. ಬೆಳಗಾವಿ, ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಿಗೆ ಮತ್ತೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ, ದಕ್ಷಿಣ ಕನ್ನಡ, ಹಾವೇರಿ, ಧಾರವಾಡ, ಚಿತ್ರದುರ್ಗ, ದಾವಣಗೆರೆ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ.