ಮನೆ ಸುದ್ದಿ ಜಾಲ ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ..!

ಇಂದು ತಮಿಳುನಾಡು, ಪಶ್ಚಿಮ ಬಂಗಾಳದಲ್ಲಿ ಚುನಾವಣೆ..!

0

ಇಂದು ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಲ್ಲಿ ವಿಧಾನಸಭೆ ಚುನಾವಣೆಗಳು ನಡೆಯಲಿವೆ. ತಮಿಳುನಾಡಿನಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ. ತಮಿಳುನಾಡಿನಲ್ಲಿ 234 ವಿಧಾನಸಭಾ ಕ್ಷೇತ್ರಗಳಲ್ಲಿ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಡಿಎಂಕೆ-ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟ ಮತ್ತು ಎಐಎಡಿಎಂಕೆ – ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದ ನಡುವೆ ನೇರ ಸ್ಪರ್ಧೆ ನಡೆಯಲಿದೆ.

ಇದೇ ಮೊದಲ ಬಾರಿಗೆ ತಮಿಳು ಸೂಪರ್ ಸ್ಟಾರ್ ದಳಪತಿ ವಿಜಯ್ ಟಿವಿಕೆ ಪಕ್ಷ ಕಟ್ಟಿ ಸ್ವತಂತ್ರವಾಗಿ ಸ್ಪರ್ಧಿಸಿ ಚುನಾವಣಾ ಕಣಕ್ಕೆ ಧುಮುಕಿದ್ದಾರೆ. 234 ವಿಧಾನಸಭಾ ಕ್ಷೇತ್ರಗಳಲ್ಲಿ 4,000ಕ್ಕೂ ಹೆಚ್ಚು ಅಭ್ಯರ್ಥಿಗಳು ಕಣದಲ್ಲಿದ್ದಾರೆ. ತಮಿಳುನಾಡು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಸಾವಿರಾರು ಜನ ತಮಿಳುನಾಡಿಗೆ ಹೊರಟಿದ್ದಾರೆ. ಬುಧವಾರ ಸಂಜೆ ಬೆಂಗಳೂರು-ಹೊಸೂರು ಹೆದ್ದಾರಿಯಲ್ಲಿ ಎಲೆಕ್ಟ್ರಾನಿಕ್ ಸಿಟಿ ಟೋಲ್ ಹಾಗೂ ಚಂದಾಪುರ ಅತ್ತಿಬೆಲೆವರೆಗೂ ಸುಮಾರು 12 ಕಿ.ಮೀ. ಟ್ರಾಫಿಕ್ ಜಾಮ್ ಆಗಿತ್ತು. ಅಂಬುಲೆನ್ಸ್‌ ಸಮೇತ ಜನ ಪರದಾಡಿದರು.

ಪಶ್ಚಿಮ ಬಂಗಾಳದಲ್ಲಿ ಒಟ್ಟು 152 ಸ್ಥಾನಗಳಿಗೆ ಮೊದಲ ಮತದಾನ ನಡೆಯಲಿದೆ. ಉತ್ತರ ಬಂಗಾಳದ ಮುರ್ಶಿದಾಬಾದ್, ಜರ್ಗಾಮ್, ಮೇದಿನಿಪುರೆ, ಬಂಕುರಾ, ಪುರುಲಿಯಾ, ಪಶ್ಚಿಮ ಬರ್ಧಮಾನ್ ಮತ್ತು ಬಿರ್‌ಬುಮ್‌ನ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಮೊದಲ ಹಂತದಲ್ಲಿ 16 ಜಿಲ್ಲೆಗಳ 152 ಕ್ಷೇತ್ರಗಳಿದ್ದು, 1,478 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಹೆಚ್ಚುವರಿ 4,660 ಸಹಾಯಕ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಒಟ್ಟು ಮತಗಟ್ಟೆಗಳ ಪೈಕಿ 8,000ಕ್ಕೂ ಹೆಚ್ಚು ಮತಗಟ್ಟೆಗಳನ್ನು ಅತಿಸೂಕ್ಷ್ಮ ಮತಗಟ್ಟೆಗಳು ಎಂದು ಗುರುತಿಸಲಾಗಿದೆ. ರಾಜ್ಯದಾದ್ಯಂತ 780ಕ್ಕೂ ಹೆಚ್ಚು ಕೇಂದ್ರ ಭದ್ರತಾ ಪಡೆಗಳ ಕಂಪನಿಗಳು ನಿಯೋಜನೆ ಮಾಡಿದೆ. ಮತದಾನಕ್ಕೂ ಮುನ್ನ ಈಗಾಗಲೇ 199ಕ್ಕೂ ಹೆಚ್ಚು ಗೂಂಡಾಗಳನ್ನು ಬಂಧಿಸಲಾಗಿದೆ.