ಮನೆ ರಾಜ್ಯ ದೌರ್ಜನ್ಯ ನಡೆದು 120 ಕಳೆದರೂ  ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ: ಖಾರವಾಗಿ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

ದೌರ್ಜನ್ಯ ನಡೆದು 120 ಕಳೆದರೂ  ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ: ಖಾರವಾಗಿ ಪ್ರಶ್ನಿಸಿದ ಸಿಎಂ ಸಿದ್ದರಾಮಯ್ಯ

0

ಬೆಂಗಳೂರು: ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಮತ್ತು ಜಾತಿ ದೌರ್ಜನ್ಯದ ಕೊಲೆ ಪ್ರಕರಣಗಳಲ್ಲಿ 120 ದಿನ ಕಳೆದರೂ ಆರೋಪಿಗಳ ವಿರುದ್ಧ ಆರೋಪ ಪಟ್ಟಿ ಏಕೆ ದಾಖಲಾಗಿಲ್ಲ ಎಂದು ಅಧಿಕಾರಿಗಳನ್ನು ಖಾರವಾಗಿ ಪ್ರಶ್ನಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೀಗೇ ಆದರೆ ಎಸ್.ಪಿ, ಡಿಸಿಪಿ ಗಳನ್ನು ಹೊಣೆ ಮಾಡಿ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಅಂಕಿ ಅಂಶಗಳನ್ನು ಮುಂದಿಟ್ಟು ಅಧಿಕಾರಿಗಳನ್ನು ತೀವ್ರವಾಗಿ ಪ್ರಶ್ನಿಸಿದರು.

ಕಳೆದ ಐದು ವರ್ಷಗಳಲ್ಲಿ ದಾಖಲಾದ 10893 ಪ್ರಕರಣಗಳಲ್ಲಿ 1100 ಪ್ರಕರಣಗಳಲ್ಲಿ 120 ದಿನಗಳಲ್ಲಿಯೂ ಚಾರ್ಜ್‌ ಶೀಟ್‌ ಹಾಕಿಲ್ಲ. ಇದು ಪರಿಶಿಷ್ಟ ಜಾತಿ, ಪಂಗಡದವರ ಬಗ್ಗೆ ಅಧಿಕಾರಿಗಳ ಅಸಡ್ಡೆಯನ್ನು ತೋರಿಸುತ್ತದೆ. ಇದರಿಂದ ಸಂತ್ರಸ್ತರಿಗೆ ನ್ಯಾಯ ಕೊಡಿಸಿದಂತಾಗುವುದಿಲ್ಲ. ಇದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಸಿದರು.

ಅಪರಾಧ ಪ್ರಕ್ರಿಯಾ ಸಂಹಿತೆ (CRPC) ಅಡಿಯಲ್ಲಿ 90 ದಿನಗಳೊಳಗೆ ಚಾರ್ಜ್‌ ಶೀಟ್‌ ಹಾಕದಿದ್ದರೆ, ಎಸ್ ಸಿ /ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ 60 ದಿನಗಳೊಳಗೆ ಆರೋಪ ಪಟ್ಟಿ ದಾಖಲಾಗದಿದ್ದರೆ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಗುತ್ತದೆ. ಹೀಗೆ ಜಾಮೀನು ಪಡೆದವರಿಗೆ ಕಾನೂನಿನ ಭಯ ಇರುತ್ತದಾ ಎಂದು ಖಾರವಾಗಿ ಪ್ರಶ್ನಿಸಿದರು.

ಕರ್ನಾಟಕ ಪೊಲೀಸ್ ದೇಶದಲ್ಲೇ ನಂಬರ್ ಒನ್ ಎನ್ನುವ ಅಭಿಪ್ರಾಯ ಇದೆ. ಆದರೆ ದೌರ್ಜನ್ಯ ತಡೆ ಕಾಯ್ದೆ ಅಡಿಯಲ್ಲಿ ಶಿಕ್ಷೆ ಪ್ರಮಾಣ ಕೇವಲ 3.44 ಇದೆ. ಅಂದರೆ ಪೊಲೀಸ್ ಇಲಾಖೆ ಕಳೆದ ಐದು ವರ್ಷಗಳಲ್ಲಿ ಎಸ್ ಸಿ/ಎಸ್ ಟಿ ದೌರ್ಜನ್ಯ ಪ್ರಕರಣಗಳ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಿತ್ತಾ ಎಂದು ಪ್ರಶ್ನಿಸಿ ಇದನ್ನು ನಮ್ಮ ಸರ್ಕಾರ ಸಹಿಸುವುದಿಲ್ಲ. ಇದಕ್ಕೆ ಎಸ್.ಪಿ. ಹಾಗೂ ಡಿಸಿಪಿಗಳನ್ನು ನೇರವಾಗಿ ಹೊಣೆ ಮಾಡಿ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ಎಚ್ವರಿಸಿ ಪ್ರಕರಣಗಳ ತನಿಖಾಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಡಿಜಿ&ಐಜಿಗೆ ಸೂಚಿಸಿದರು.

ಹಿಂದಿನ ಲೇಖನಪ್ರಾಯಶ್ಚಿತ್ತವು ಹೆಮ್ಮೆಗಿಂತ ಉತ್ತಮ
ಮುಂದಿನ ಲೇಖನಕೇಂದ್ರ, ರಾಜ್ಯ ಸರ್ಕಾರದ ಶವಯಾತ್ರೆ ವೇಳೆ ಪ್ರತಿಕೃತಿ ಹೊತ್ತೋಯ್ದ ಪೊಲೀಸರು: ಪೊಲೀಸರು – ದಸಂಸ ಕಾರ್ಯಕರ್ತರ ಜಟಾಪಟಿ