ಧಾರವಾಡ: ರಾಜ್ಯದಲ್ಲಿ ಇನ್ನೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಧಾರವಾಡ ಜಿಲ್ಲೆ ಅಣ್ಣಿಗೇರಿ ತಾಲೂಕಿನ ಭದ್ರಾಪುರ ಗ್ರಾಮದ ಬಳಿ ಸಂಭವಿಸಿರುವ ಈ ದುರ್ಘಟನೆಯಲ್ಲಿ ಮೂವರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ.
ಘಟನೆ ಗದಗ – ಹುಬ್ಬಳ್ಳಿ ನಡುವಿನ ರಾಷ್ಟ್ರೀಯ ಹೆದ್ದಾರಿ 63 ರಲ್ಲಿ ನಡೆದಿದೆ. ಹೆದ್ದಾರಿಯ ಬದಿಯಲ್ಲಿ ನಿಂತಿದ್ದ ಲಾರಿಗೆ ಕಾರು ನಿಯಂತ್ರಣ ತಪ್ಪಿ ಜೋರಾಗಿ ಡಿಕ್ಕಿ ಹೊಡೆದು ಈ ಭೀಕರ ಅನಾಹುತ ಸಂಭವಿಸಿದೆ. ಲಾರಿಗೆ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದ್ದು, ಕಾರಿನಲ್ಲಿದ್ದ ಮೂವರು ಪ್ರಯಾಣಿಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಘಟನೆಯ ವೇಳೆ ಕಾರು ಹುಬ್ಬಳ್ಳಿಯತ್ತ ಸಾಗುತ್ತಿದ್ದು, ಲಾರಿಗೆ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಕಾರಿನ ಒಳಗೆ ಸಿಲುಕಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇವರ ಗುರುತಿನ ವಿವರಗಳು ಇನ್ನೂ ಬಹಿರಂಗವಾಗಿಲ್ಲ. ಮೃತದೇಹಗಳನ್ನು ಹೊರತೆಗೆದು ಶವ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಲಾಗಿದೆ.
ಘಟನೆಯ ಮಾಹಿತಿ ತಿಳಿದ ಕೂಡಲೇ ಅಣ್ಣಿಗೇರಿ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದಾರೆ.















