ಸಕಲೇಶಪುರ: ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಬಾಗೆ ಎಂಬಲ್ಲಿನಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಕಾಣದೇ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದ ದುರ್ಘಟನೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇನ್ನಿಬ್ಬರು ಗಂಭೀರ ಗಾಯಗೊಂಡಿದ್ದಾರೆ.
ನಾಲ್ವರು ಯುವಕರು ಎರ್ಟಿಗಾ ಕಾರಿನಲ್ಲಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ತೆರಳುತ್ತಿದ್ದರು. ಬೆಳಗಿನ ಜಾವ ಸಕಲೇಶಪುರದ ಬಾಗೆ ಸಮೀಪದ ರಸ್ತೆಯಲ್ಲಿ ಮಳೆ ಮುಂದುವರೆದಿದ್ದರಿಂದ ರಸ್ತೆ ಸ್ಪಷ್ಟವಾಗಿ ಕಾಣಿಸುತ್ತಿರಲಿಲ್ಲ. ಈ ಸಂದರ್ಭದಲ್ಲಿ ಕಾರಿನ ಚಾಲಕ ನಿಯಂತ್ರಣ ಕಳೆದುಕೊಂಡು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದಾನೆ.
ಅಪಘಾತದಲ್ಲಿ ಸಾವನ್ನಪ್ಪಿದವರನ್ನು ಬೆಂಗಳೂರು ಮೂಲದ ಅಭಿಷೇಕ್ ಮತ್ತು ಶರತ್ ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇನ್ನಿಬ್ಬರು ಯುವಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಸಕಲೇಶಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಯ ಮಾಹಿತಿ ಲಭಿಸುತ್ತಿದಂತೆಯೇ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದರು. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ ಮತ್ತು ಅಪಘಾತದ ತೀವ್ರತೆಯು ಈ ಘಟನೆಯ ಭೀಕರತೆಯನ್ನು ತೋರಿಸುತ್ತದೆ. ಪೊಲೀಸರು ಪ್ರಕರಣ ದಾಖಲಿಸಿ ತನಿಖೆ ಪ್ರಾರಂಭಿಸಿದ್ದಾರೆ.














