ಮನೆ ಕಾನೂನು ಅಪಹರಣ ಕೇಸ್​ ನಲ್ಲಿ ಬಂಧನ ಭೀತಿ: ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಭವಾನಿ ರೇವಣ್ಣ

ಅಪಹರಣ ಕೇಸ್​ ನಲ್ಲಿ ಬಂಧನ ಭೀತಿ: ಜಾಮೀನು ಕೋರಿ ಹೈಕೋರ್ಟ್ ಮೆಟ್ಟಿಲೇರಿದ ಭವಾನಿ ರೇವಣ್ಣ

0

ಬೆಂಗಳೂರು: ಹಾಸನ ಸಂಸದ ಪ್ರಜ್ವಲ್​ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣದ ಸಂತ್ರಸ್ತ ಮಹಿಳೆಯ ಅಪಹರಣ ಕೇಸ್​ ನಲ್ಲಿ ಬಂಧನ ಭೀತಿಯಲ್ಲಿರುವ ಭವಾನಿ ರೇವಣ್ಣ, ನಿರೀಕ್ಷಣಾ ಜಾಮೀನು ನಿರಾಕರಿಸಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಕ್ರಮ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

Join Our Whatsapp Group

ಈ ಸಂಬಂಧ ಭವಾನಿ ರೇವಣ್ಣ ಅರ್ಜಿ ಸಲ್ಲಿಸಿದ್ದು, ವಿಚಾರಣೆಗೆ ಇನ್ನಷ್ಟೇ ನಿಗದಿಯಾಗಬೇಕಾಗಿದೆ.

ವಿದ್ಯುನ್ಮಾನ ಮಾಧ್ಯಮಗಳಲ್ಲಿ ಬಿಂಬಿಸಿರುವಂತೆ ಎಸ್‌ಐಟಿ ಜಾರಿ ಮಾಡಿರುವ ನೋಟಿಸ್‌ನಲ್ಲಿ ಯಾವುದೇ ಕಾನೂನಿನ ನಿಬಂಧನೆ ಬಗ್ಗೆ ಉಲ್ಲೇಖಿಸಲಾಗಿಲ್ಲ. ಹೀಗಾಗಿ, ಬಂಧನ ಭೀತಿ ಇದೆ ಎಂದು ಅರ್ಜಿಯಲ್ಲಿ ಭವಾನಿ ರೇವಣ್ಣ ಆತಂಕ ವ್ಯಕ್ತಪಡಿಸಿದ್ದಾರೆ.

ಪ್ರಜ್ವಲ್ ರೇವಣ್ಣ ಮತ್ತು ಸಂತ್ರಸ್ತ ಮಹಿಳೆ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ಅವರಿಗೆ ಎಸ್​ಐಟಿ ನೋಟಿಸ್ ಜಾರಿ ಮಾಡಿ, ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿತ್ತು. ವಿಚಾರಣೆಗೆ ಒಳಗಾದರೆ ಬಂಧಿಸುವ ಸಾಧ್ಯತೆಯಿದೆ. ಆದ್ದರಿಂದ ನಿರೀಕ್ಷಣಾ ಜಾಮೀನು ಮಂಜೂರು ಮಾಡಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.

ಪ್ರಕರಣದ ಹಿನ್ನೆಲೆ: ಸಂತ್ರಸ್ತ ಮಹಿಳೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆರ್.ನಗರ ಪೊಲೀಸ್​​ ಠಾಣೆಯಲ್ಲಿ ಐಪಿಸಿ ವಿವಿಧ ಸೆಕ್ಷನ್​ಗಳ ಅಡಿ ಎಫ್‌ಐಆರ್ ದಾಖಲಿಸಲಾಗಿದೆ. ಇದರಲ್ಲಿ ಭವಾನಿ ಪತಿ, ಜೆಡಿಎಸ್​ ಶಾಸಕ ಹೆಚ್.ಡಿ. ರೇವಣ್ಣ ಮೊದಲ ಆರೋಪಿ ಹಾಗೂ ಸತೀಶ ಬಾಬಣ್ಣ ಎರಡನೇ ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿ, ಎಸ್​ಐಟಿ ನೋಟಿಸ್ ಜಾರಿ ಮಾಡಿದ್ದರೂ ಭವಾನಿ ರೇವಣ್ಣ ಅವರು ಹಾಜರಾಗಿಲ್ಲ. ಇದೀಗ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್ ಮೊರೆ ಹೋಗಿದ್ದಾರೆ.