ಹಾಸನ: ಶ್ರವಣಬೆಳಗೊಳದ ಜೈನ ಮಠದ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ನಿಧನ ವಿಚಾರ ತಿಳಿಯುತ್ತಿದ್ದಂತೆಯೇ ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ನಿರ್ಮಲಾನಂದನಾಥ ಸ್ವಾಮೀಜಿ, ಜಿಲ್ಲಾಧಿಕಾರಿ ಎಂ.ಎಸ್.ಅರ್ಚನಾ, ಬೆಳ್ಳೂರು ಆಸ್ಪತ್ರೆಗೆ ಭೇಟಿ ನೀಡಿ ಅಂತಿಮ ದರ್ಶನ ಪಡೆದರು.
ಸಂಜೆ ಚಂದ್ರಗಿರಿಬೆಟ್ಟದ ತಪ್ಪಲಿನಲ್ಲಿ ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಎಸ್. ಅರ್ಚನಾ ತಿಳಿಸಿದ್ದಾರೆ.
ತೀವ್ರ ಕಾಲು ನೋವಿನಿಂದ ಬಳಲುತ್ತಿದ್ದ ಶ್ರೀಗಳು ಗುರುವಾರ ಬೆಳಿಗ್ಗೆ ನಿತ್ಯಕರ್ಮಕ್ಕೆ ಎದ್ದಾಗ, ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ತಲೆಗೆ ಗಂಭೀರವಾಗಿ ಪೆಟ್ಟಾಗಿತ್ತು. ಕೂಡಲೇ ಮಠದ ಸಿಬ್ಬಂದಿ ಶ್ರೀಗಳನ್ನು ಬೆಳ್ಳೂರಿನ ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು ಎಂದು ಹೇಳಿದರು.
ಸ್ವಾಮೀಜಿ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಯಿ, ಮಾಜಿಪ್ರಧಾನಿ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಶಾಸಕರಾದ ಸಿ.ಎನ್. ಬಾಲಕೃಷ್ಣ, ಎಚ್.ಡಿ.ರೇವಣ್ಣ ಸೇರಿ ಅನೇಕ ಗಣ್ಯರು ಕಂಬನಿ ಮಿಡಿದಿದ್ದಾರೆ.
ಶ್ರವಣಬೆಳಗೊಳದ ಚಾವುಂಡರಾಯ ಮಂಟಪದಲ್ಲಿ ಸ್ವಾಮೀಜಿ ಅವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಸ್ವಸ್ತಿಶ್ರೀಗಳ ಅಂತಿಮ ದರ್ಶನಕ್ಕೆ ವಿವಿಧ ಕ್ಷೇತ್ರದ ಗಣ್ಯರು ಸೇರಿ ರಾಜ್ಯದ ವಿವಿಧ ಮೂಲಗಳಿಂದ ಜನಸಾಗರವೇ ಹರಿದು ಬಂದಿದೆ. ಭದ್ರತೆಗಾಗಿ ಸುಮಾರು ನೂರಾರು ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದ್ದಾರೆ.
ಸಂಜೆ ಸೂರ್ಯಾಸ್ತಕ್ಕೂ ಮುನ್ನವೇ ಶ್ರವಣಬೆಳಗೊಳದ ಚಂದ್ರಗಿರಿ (ಚಿಕ್ಕಬೆಟ್ಟ ಸಮಾಧಿ ಗುಡ್ಡ) ಬೆಟ್ಟದ ತಪ್ಪಲಿನಲ್ಲಿ ಜೈನ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನಡೆಸಲಾಗುವುದು ಎಂದು ತಿಳಿಸಿದ್ದಾರೆ.