ಮೈಸೂರು: ಮೈಸೂರು ಜಿಲ್ಲೆಯ ಟಿ.ನರಸೀಪುರದಲ್ಲಿ ಹನುಮ ಜಯಂತಿ ವೇಳೆ ಗುಂಪು ಘರ್ಷಣೆ ನಡೆದಿದ್ದು, ಈ ವೇಳೆ ಯುವ ಬ್ರಿಗೇಡ್ ಕಾರ್ಯಕರ್ತನನ್ನು ಬಾಟಲಿಯಿಂದ ಚುಚ್ಚಿ ಹತ್ಯೆ ಮಾಡಲಾಗಿದೆ.
ವೇಣುಗೋಪಾಲ್ ನಾಯಕ್ ಕೊಲೆಯಾದ ಯುವಕ.
ಮೈಸೂರಿನ ತಿ.ನರಸೀಪುರ ಪಟ್ಟಣದ ಹೊರ ವಲಯದಲ್ಲಿ ನಡೆದಿದ್ದು, ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.
ಮೃತ ಯುವಕ ವೇಣುಗೋಪಾಲ್ ಯುವಬ್ರಿಗೇಡ್ ನ ಕಾರ್ಯಕರ್ತನಾಗಿದ್ದು, ನರಸೀಪುರ ಪಟ್ಟಣದ ಶ್ರೀರಾಂಪುರ ಕಾಲೋನಿ ನಿವಾಸಿಯಾಗಿದ್ದಾನೆ, ನಿನ್ನೆ ನಡೆದ ಹನುಮ ಜಯಂತಿ ವೇಳೆ ಎರಡು ಗುಂಪುಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು, ಈ ವೇಳೆ ಎರಡು ಗುಂಪುಗಳ ನಡುವೆ ಮದ್ಯಸ್ತಿಕೆ ವಹಿಸಿ ಸಮಾಧಾನ ಪಡಿಸಲಾಗಿತ್ತು. ರಾತ್ರಿ ವೇಣುಗೋಪಾಲ ನಾಯಕನಿಗೆ ಕರೆ ಮಾಡಿದ ಕೆಲವು ಗಲಾಟೆ ವಿಚಾರವಾಗಿ ಮಾತನಾಡೋಣ ಬಾ ಎಂದು ಸಂತೆಮಾಳದ ಬಳಿ ಕರೆಸಿಕೊಂಡು ಹತ್ಯೆ ಮಾಡಿದ್ದಾರೆ ಎಂದು ಪ್ರಾಥಮಿಕ ವರದಿಗಳಿಂದ ತಿಳಿದುಬಂದಿದೆ.
ತಿ.ನರಸೀಪುರ ಸಾರ್ವಜನಿಕ ಆಸ್ಪತ್ರೆಗೆ ಮೃತ ದೇಹ ರವಾನೆ ಮಾಡಲಾಗಿದ್ದು, ಪೊಲೀಸರು ಘಟನಾ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಯುವ ಬ್ರಿಗೇಡ್ ಕಾರ್ಯಕರ್ತನ ಕೊಲೆಯಾದ ಹಿನ್ನೆಲೆಯಲ್ಲಿ ತಾಲೂಕು ಆಸ್ಪತ್ರೆಗೆ ಯುವ ಬ್ರಿಗೇಡ್ ಮುಖಂಡ ಚಕ್ರವರ್ತಿ ಸೂಲಿಬೆಲೆ ಭೇಟಿ ನೀಡಿದ್ದು, ಮೃತ ಯುವಕನ ಅಂತಿಮ ದರ್ಶನ ಪಡೆದಿದ್ದಾರೆ. ಮೃತ ಯುವಕನ ವೇಣುಗೋಪಾಲ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ.